ಬೆಂಗಳೂರು : ಅತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಕನ್ನಡ ಚಲನಚಿತ್ರ ಕಾಂತಾರದಲ್ಲಿ ತೋರಿಸಲಾಗಿರುವ ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಲ್ಲಿ ನಟ ಚೇತನ್ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪರಿಣಾಮ ಚೇತನ್ ವಿಚಾರಣೆ ಎದುರಿಸಲೇಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ನಗರದ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ನಟ ಚೇತನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಪೀಠ, ಪ್ರಕರಣವಿನ್ನೂ ತನಿಖಾ ಹಂತದಲ್ಲಿದೆ. ಈ ಹಂತದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪುಗಳನ್ನು ಆಧರಿಸಿ ಅರ್ಜಿ ವಜಾಗೊಳಿಸಿದೆ.
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ನಟರೂ ಆಗಿರುವ ಅರ್ಜಿದಾರರು ತಮ್ಮ ಅಭಿಪ್ರಾಯವನ್ನಷ್ಟೇ ಹಂಚಿಕೊಂಡಿದ್ದಾರೆ. ಇದರಿಂದ, ಯಾರಿಗೂ ತೊಂದರೆಯಾಗಿಲ್ಲ, ಸಮಾಜದಲ್ಲಿ ಅಶಾಂತಿಯೂ ಉದ್ಭವಿಸಿಲ್ಲ. ಹೀಗಿದ್ದರೂ, ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು ಅದನ್ನು ರದ್ದುಗೊಳಿಸಬೇಕೆಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಸರ್ಕಾರದ ಪರ ವಕೀಲರು, ಅರ್ಜಿದಾರರು ಉದ್ದೇಶಪೂರ್ವಕವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜತೆಗೆ ಪೊಲೀಸರು ಇನ್ನೂ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ತನಿಖಾ ಹಂತದಲ್ಲಿರುವ ಪ್ರಕರಣದ ರದ್ದುಗೊಳಿಸಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.