ಬೆಂಗಳೂರು: ಕಣ್ವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅವ್ಯವಹಾರ ಪ್ರಕರಣದಲ್ಲಿ ಸೊಸೈಟಿಗೆ ಸೇರಿದ 250 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ಕ್ರಮ ಜರುಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮಾಹಿತಿ ನೀಡಿದೆ.
ಸೊಸೈಟಿಯ ಅವ್ಯವಹಾರ ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ಆಕ್ಷೇಪಿಸಿ ಕೆ. ಎಸ್. ರಮೇಶ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದಿಸಿ, ಪ್ರಕರಣದ ಸಕ್ಷಮ ಪ್ರಾಧಿಕಾರಿಯನ್ನು ಬದಲಿಸಲಾಗಿದೆ. ಈವರೆಗೆ ಸೊಸೈಟಿಯ 172 ಆಸ್ತಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 32 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆ 250 ಕೋಟಿ ರೂ.ಮೊತ್ತದ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.