ಬೆಂಗಳೂರು: ರಸ್ತೆಗುಂಡಿಗಳಿಗೆ ಸಂಬಂಧಿಸಿ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಮ್ ಆದ್ಮಿ ಪಕ್ಷವು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಎಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಬೆಂಗಳೂರಿನ ಜನರಿಗೆ ಉತ್ತಮ ಗುಣಮಟ್ಟದ ರಸ್ತೆಗಳು ಸಿಗಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯು ವರ್ಷಕ್ಕೂ ಅಧಿಕ ಸಮಯದಿಂದ ವಿವಿಧ ರೀತಿಯ ಚಳವಳಿ ಮಾಡುತ್ತಿದೆ. ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ನಾವು ಹಲವು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಗುಂಡಿಗಳ ಸುತ್ತ ರಂಗೋಲಿ ಹಾಕಿ ಪೂಜೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದೇವೆ.
ಗುಂಡಿಗಳಿಗೆ ಕಾರಣವಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ 71 ದೂರುಗಳನ್ನು ನೀಡಿದ್ದೇವೆ. ಆದರೆ, ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದ ಕಾರಣ ಬೃಹತ್ ಪ್ರತಿಭಟನೆ ಆಯೋಜಿಸಿದ್ದೇವೆ ಎಂದು ಹೇಳಿದರು.
ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಭಾಸ್ಕರ್ ರಾವ್ ಮಾತನಾಡಿ ರಸ್ತೆ ಗುಂಡಿ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಏಕೈಕ ಪಕ್ಷವೆಂದರೆ ಆಮ್ ಆದ್ಮಿ ಪಾರ್ಟಿ. ಇಂದು ಪೊಲೀಸರು ನಮ್ಮನ್ನು ಬಂಧಿಸಿದರೂ, ನಮ್ಮ ಹೋರಾಟ ಇನ್ನೊಂದು ದಿನ ಮುಂದುವರಿಯುತ್ತದೆ. ಹಲವು ರೀತಿಯ ತೆರಿಗೆಗಳನ್ನು ಕಟ್ಟುವ ಜನರಿಗೆ ಉತ್ತಮ ರಸ್ತೆಗಳು ಸಿಗುವಂತೆ ಮಾಡಲು ಆಮ್ ಆದ್ಮಿ ಪಾರ್ಟಿ ಸದಾ ಬದ್ಧವಾಗಿರುತ್ತದೆ.
ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರಕ್ಕೆ ಹಣದ ಕೊರತೆಯಿಲ್ಲ. ಬದಲಾಗಿ ನಿಯತ್ತಿನ ಕೊರತೆಯಿದೆ. ಬಿಬಿಎಂಪಿ ಚುನಾವಣೆ ನಡೆದು ತಮ್ಮಂದಿರು ಬಂದರೆ, ಅಣ್ಣಂದಿರಾದ ತಮಗೆ ಲೂಟಿಗೆ ಅವಕಾಶ ಸಿಗುವುದಿಲ್ಲ ಎಂಬ ಕಾರಣಕ್ಕೆ ಬೆಂಗಳೂರಿನ ಶಾಸಕರು ಚುನಾವಣೆ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.