ಬೆಂಗಳೂರು: ಕರ್ನಾಟಕದಲ್ಲಿ ಹೈವೋಲ್ಟೇಜ್ ವಿಧಾನಸಭಾ ಚುನಾವಣಾ ಪ್ರಚಾರದ ನಂತರ ಮತದಾರರು ಇಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ 224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವ ತವಕದಲ್ಲಿವೆ. ಸರ್ಕಾರ ರಚನೆಗೆ ಬೇಕಿರುವ ಮ್ಯಾಜಿಕ್ ನಂಬರ್ 113. ಲಿಂಗಾಯತ ಮತ್ತು ಒಕ್ಕಲಿಗ ಮತದಾರರು ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಮಹತ್ವದ ಕ್ಷೇತ್ರಗಳು: ವರುಣ, ಕನಕಪುರ, ಶಿಗ್ಗಾಂವಿ, ಹುಬ್ಬಳ್ಳಿ-ಧಾರವಾಡ, ಚನ್ನಪಟ್ಟಣ, ಶಿಕಾರಿಪುರ, ಚಿತ್ತಾಪುರ, ರಾಮನಗರ ಮತ್ತು ಚಿಕ್ಕಮಗಳೂರು ಚುನಾವಣೆಗಳಲ್ಲಿ ಮಹತ್ವದ ಕೆಲವು ಕ್ಷೇತ್ರಗಳು. ಬಿಜೆಪಿ ಮತ್ತು ಕಾಂಗ್ರೆಸ್ ಪ್ರಮುಖ ಕ್ಷೇತ್ರಗಳಲ್ಲಿ ಬಲಾಢ್ಯರನ್ನು ಕಣಕ್ಕಿಳಿಸಿದೆ. ಇದೇ ವೇಳೆ ಹಲವಾರು ಹಿರಿಯ ನಾಯಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಬಂಡಾಯವೆದ್ದ ಕೆಲವು ಅಭ್ಯರ್ಥಿಗಳು ಪಕ್ಷ ತೊರೆದು ಕಾಂಗ್ರೆಸ್, ಜೆಡಿಎಸ್‌ಗೆ ಸೇರಲು ಕಾರಣವಾಯಿತು.
ಘಟಾನುಘಟಿ ಅಭ್ಯರ್ಥಿಗಳು: ಅವರಲ್ಲೊಬ್ಬರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್. ಇವರಿಗೆ ಪಕ್ಷ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಿದ ನಂತರ, ಕಾಂಗ್ರೆಸ್ ಸೇರಿದರು. ಅದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದಾರೆ. ಶೆಟ್ಟರ್ ಹಲವು ಬಾರಿ ಗೆದ್ದಿರುವ ಕ್ಷೇತ್ರವಿದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾವು ಸತತ ಮೂರು ಬಾರಿ ಗೆದ್ದಿರುವ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮತ್ತೊಬ್ಬ ಪ್ರಮುಖ ಅಭ್ಯರ್ಥಿ. ಬಿಜೆಪಿ ಕಣ್ಣಿಟ್ಟಿರುವ ಮತ್ತೊಂದು ಕ್ಷೇತ್ರವೆಂದರೆ ವರುಣ. ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2008 ರಿಂದ ಗೆಲುವಿನ ಸರಣಿಯೊಂದಿಗೆ ಸಿಟ್ಟಿಂಗ್ ಕ್ಷೇತ್ರ ವರುಣದಿಂದ ಸ್ಪರ್ಧಿಸುತ್ತಿದ್ದಾರೆ.
ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ.ವಿಜಯೇಂದ್ರರನ್ನು ವರುಣದಿಂದ ಕಣಕ್ಕಿಳಿಸಲು ನಿರಾಕರಿಸಿದರು. ವಿಜಯೇಂದ್ರ ಬಿಜೆಪಿ ಭದ್ರಕೋಟೆ ಶಿಕಾರಿಪುರದಿಂದ ಸ್ಪರ್ಧಿಸುತ್ತಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕನಕಪುರದಿಂದ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿದ್ದು, ಬಿಜೆಪಿಯ ಪ್ರಬಲ ಒಕ್ಕಲಿಗ ನಾಯಕ ಹಾಗೂ ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಇಲ್ಲಿ ಸ್ಪರ್ಧಿಸುತ್ತಿದ್ದಾರೆ. ಚನ್ನಪಟ್ಟಣಕ್ಕೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿಯ ಯೋಗೇಶ್ವರ್ ಮತ್ತು ಕಾಂಗ್ರೆಸ್ ಪಕ್ಷದ ಗಂಗಾಧರ್ ನಡುವೆ ತೀವ್ರ ಪೈಪೋಟಿ ಇದೆ. ಕುಮಾರಸ್ವಾಮಿ ಮತ್ತು ಯೋಗೇಶ್ವರ ಇಬ್ಬರೂ ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದವರು.