ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ರಚಿಸಿರುವ ನ್ಯಾ.ಡಾ.ಕೆ.ಭಕ್ತವತ್ಸಲ ನೇತೃತ್ವದ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಶಿಫಾರಸ್ಸು ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ನೀಡಿರುವ ವರದಿಯನ್ನು ಯಥಾವತ್ತಾಗಿ ಒಪ್ಪಿಕೊಳ್ಳುವ ತೀರ್ಮಾನವನ್ನು ಮಾಡಲಾಗಿದೆ ಎಂದರು.
ಇದರ ಜೊತೆಗೆ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಒಪ್ಪಿಗೆ ನೀಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ ಈಗ ನ್ಯಾ. ಭಕ್ತವತ್ಸಲ ಆಯೋಗದ ವರದಿಯಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಮುಂದಿನ ಚುನಾವಣೆ ವೇಳೆಗೆ ಎಲ್ಲ ದತ್ತಾಂಶಗಳನ್ನು ಇಟ್ಟುಕೊಂಡು ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ತೀರ್ಮಾನಗಳನ್ನು ಸರ್ಕಾರ ಸುಪ್ರೀಂಕೋರ್ಟ್ ಸೂಚನೆಯಂತೆ ಅನುಷ್ಠಾನಗೊಳಿಸುತ್ತದೆ ಎಂದು ಹೇಳಿದರು.
ನೂತನ ಏರೋಸ್ಪೇಸ್ ನೀತಿ : ರಾಜ್ಯದಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಹೆಚ್ಚು ಒತ್ತು ನೀಡಿ ರಫ್ತಿಗೆ ಉತ್ತೇಜನ ನೀಡಲು ಮುಂದಿನ 5 ವರ್ಷಗಳಿಗೆ ಏರೋಸ್ಪೇಸ್ ನೀತಿಗೆ ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕವನ್ನು ಏರೋಸ್ಪೇಸ್ ಉದ್ಯಮದ ಹಬ್ ಮಾಡಲು ಈ ನೀತಿ ಸಹಕಾರಿಯಾಗಲಿದೆ.