ಬೆಂಗಳೂರು: ನಾಳೆಯಿಂದ ನಡೆಯಲಿರುವ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ಸಂಪುಟ ವಿಸ್ತರಣೆಯ ಸಸ್ಪೆನ್ಸ್ಗೆ ಫೈನಲ್ ಟಚ್ ನೀಡುವ ಸಾಧ್ಯತೆ ಹೆಚ್ಚಿದೆ.
ಈ ಭಾನುವಾರವೇ ಸಂಪುಟ ವಿಸ್ತರಣೆ ಮಾಡಲು ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ ಎಂಬ ಮಾತು ಬಲವಾಗಿ ಕೇಳಿ ಬರುತ್ತಿದೆ. ಕುಂದಾನಗರಿ ನಾಳೆಯಿಂದ ಎರಡು ದಿನಗಳ ಕಾಲ ಕೇಸರಿ ಮಯವಾಗಲಿದೆ. ಮಹತ್ವದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಹಾಗೂ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ನಾಯಕರು ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ದೆಹಲಿ ವರಿಷ್ಠರು ಪಾಲ್ಗೊಳ್ಳಲಿದ್ದಾರೆ. ಹೈಕಮಾಂಡ್ ನೀಡಿರುವ ಸಂಪುಟ ವಿಸ್ತರಣೆ ಸಂದೇಶವನ್ನು ಅರುಣ್ ಸಿಂಗ್ ಸಭೆಯಲ್ಲಿ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ಇರುವ ಗೊಂದಲಕ್ಕೆ ನಾಳೆ ನಡೆಯುವ ಸಭೆಯಲ್ಲಿ ಅಂತಿಮ ತೆರೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಭಾನುವಾರವೇ ಸಂಪುಟ ವಿಸ್ತರಣೆಗೆ ಮುಹೂರ್ತ?
ಕುಂದಾನಗರಿಯಲ್ಲಿ ನಡೆಯಲಿರುವ ಕೇಸರಿ ಸಭೆಯಲ್ಲೇ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಯಲಿದ್ದು, ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ದೆಹಲಿ ವರಿಷ್ಠರ ಸಮ್ಮುಖದಲ್ಲಿ ನಡೆಯಲಿರುವ ಸಭೆಯಲ್ಲಿ ಬಹು ನಿರೀಕ್ಷಿತ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಮತ್ತೊಮ್ಮೆ 3+2 ಮಾದರಿ ಸಂಪುಟ ವಿಸ್ತರಣೆ ಪ್ರಸ್ತಾಪಕ್ಕೆ ಸಿಎಂ ಚಿಂತನೆ; ಕತ್ತಿ, ಸಿಪಿವೈಗೂ ಸಿಗುತ್ತಾ ಅವಕಾಶ?
ಸಂಪುಟ ವಿಸ್ತರಣೆಯೋ, ಸಂಪುಟ ಪುನಾರಚನೆ ಮಾಡುವ ಬಗ್ಗೆನೂ ನಾಳೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬಹುತೇಕ ಸಂಪುಟ ವಿಸ್ತರಣೆಗೆ ಅಸ್ತು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರಂತೆ ಭಾನುವಾರ ಅಂದರೆ ಚಳಿಗಾಲದ ಅಧಿವೇಶನದ ಮುನ್ನಾ ದಿನ ಸಂಪುಟ ವಿಸ್ತರಣೆಯ ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನ ಪ್ರಾರಂಭವಾಗುವ ಮುನ್ನ ತೆರವಾಗಿರುವ ಸಚಿವ ಸ್ಥಾನ ಭರ್ತಿ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಹಾಗಾಗಿ ಭಾನುವಾರವೇ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.