ಬೆಂಗಳೂರು:ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 2023ರ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಹೆಸರಿನಲ್ಲಿ ಇಡೀ ವರ್ಷ ಕಾರ್ಯಕ್ರಮ ನಡೆಸಲು ಬಜೆಟ್ನಲ್ಲಿ ಘೋಷಿಸಲಾಗಿದೆ.
ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವಜನತೆಯಲ್ಲಿ ಕನ್ನಡ- ಕನ್ನಡಿಗ- ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಲೋಕಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ. ಎಂ. ಕಲಬುರಗಿ ಅವರ ಹೆಸರಿನಲ್ಲಿ ಒಂದು ಟ್ರಸ್ಟ್ ಸ್ಥಾಪಿಸಲಾಗುವುದು. ಖ್ಯಾತ ಸಾಹಿತಿ ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಮೂಲಕ ಅವರ ಸಾಹಿತ್ಯ ಹಾಗೂ ಪರಿಸರ ಸಂರಕ್ಷಣೆಯ ಚಿಂತನೆಗಳನ್ನು ಯುವ ಜನಾಂಗಕ್ಕೆ ಪರಿಚಯಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು 2 ಕೋಟಿ ರೂ. ಗಳನ್ನು ಒದಗಿಸಲಾಗುವುದು.
ನಮ್ಮ ರಾಜ್ಯದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು ಮತ್ತು ಯುವ ಪೀಳಿಗೆಗೆ ಪರಿಚಯಿಸಲು ಪ್ರಮುಖ ಪಾತ್ರವಹಿಸುತ್ತಿರುವ ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ ಎರಡು ಕೋಟಿ ರೂ. ಅನುದಾನ ನೀಡಲಾಗುವುದು. ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.
ಬಂಜಾರ ಸಮುದಾಯದ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ ಕಲೆಗಳು ನಶಿಸಿ ಹೋಗುತ್ತಿರುವ ಕಾರಣ ಅವರ ಸಂಸ್ಕೃತಿಯನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಕರ್ನಾಟಕದ ಬುಡಕಟ್ಟು ಸಮುದಾಯದ ಜನರ ಕಲಾಪ್ರತಿಭೆಯನ್ನು ಪರಿಚಯಿಸುವ ಹಿತದೃಷ್ಟಿಯಿಂದ ಮತ್ತು ಅವರ ಸಂಸ್ಕೃತಿ, ಜಾನಪದ ವೈದ್ಯ ಪದ್ಧತಿ, ಜಾನಪದ ಕಲೆಗಳ ಪ್ರದರ್ಶನ, ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದಕ್ಕೆ ಉತ್ತೇಜನ ನೀಡಲು ಬುಡಕಟ್ಟು ಜನಾಂಗದ ಕಲಾವಿದರ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಜೆಟ್ ಭಾಷಣದಲ್ಲಿ ಸಾಹಿತಿಗಳ ಸಾಲುಗಳನ್ನು ಉಲ್ಲೇಖಿಸಿದ ಸಿಎಂ:'ಒಂದೇ ಒಂದೇ ಕರ್ನಾಟಕವೊಂದೇ, ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ, ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ'. ಹೀಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ಭಾಷಣದಲ್ಲಿ ಪ್ರಸಿದ್ಧ ಕವಿಗಳು ಹಾಗೂ ಸಾಹಿತಿಗಳ ಸಾಲುಗಳನ್ನು ಉಲ್ಲೇಖಿಸಿದರು.