ಬೆಂಗಳೂರು :ಕೋವಿಡ್ ಸಂಕಷ್ಟದಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿದ ನೆರವನ್ನು ಯಾವುದೇ ಕಾರಣಕ್ಕೂ ಮರೆಯಬಾರದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ತಿಳಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ವೇಳೆ ಮಾತನಾಡಿದ ಅವರು, ಆತ್ಮ ನಿರ್ಭರ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನೀಡಿದೆ. ರಾಜ್ಯ ಸರ್ಕಾರ ಸಮರ್ಥವಾಗಿ ಕಾರ್ಯ ನಿರ್ವಹಿಸಿದೆ. ಪ್ರತಿಪಕ್ಷ ಸಹ ಮಾನವೀಯ ಸಹಕಾರ ನೀಡಿದ್ದಕ್ಕೆ ಅಭಿನಂದಿಸುತ್ತೇನೆ.
ಕೋವಿಡ್ ಅವಧಿಯಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಸಂಖ್ಯೆಯಲ್ಲಿ ಬಡವರಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಿದೆ. ಜೊತೆಗೆ ವಿದೇಶದಲ್ಲಿ ಸಿಲುಕಿದ್ದ 6 ಸಾವಿರ ಅನಿವಾಸಿ ಭಾರತೀಯರನ್ನು ಕರೆತರುವ ಕಾರ್ಯ ಮಾಡಿದ್ದಾರೆ. ಲಕ್ಷಾಂತರ ಮಂದಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ. ಪ್ರಸಕ್ತ ವರ್ಷ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ಸಾಧನೆ ವಿವರಿಸಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಏರೋ ಸ್ಪೇಸ್ ಪಾಲಿಸಿ, ನವೀಕರಣ ಇಂಧನ, ಹಸಿರು ಸೂಚ್ಯಂಕ ಸಾಧನ ಕಿಟ್, ಬಸ್ಗಳ ಸದ್ಭಳಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಯಡಿಯೂರಪ್ಪ ಸರ್ಕಾರ ಸಾಧನೆ ಮಾಡಿದೆ. ಹಲವು ನ್ಯೂನತೆಯನ್ನು ನಿವಾರಿಸಿದೆ, ಹೊಸ ಕೈಗಾರಿಕಾ ನೀತಿ ಜಾರಿಗೆ ಬಂದಿದೆ, 14,320 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರ ಪಂಪ್ ಸೆಟ್ಗೆ ವಿದ್ಯುತ್, ಶೌಚಾಲಯ ನಿರ್ಮಾಣ, ಕಾಂಕ್ರೀಟ್ ರಸ್ತೆ ನಿರ್ಮಾಣ, ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವುದು ಸೇರಿದಂತೆ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಶೇ.80ರಷ್ಟು ಭರವಸೆಗಳನ್ನು ಈಡೇರಿಸಿದೆ. ಪ್ರತಿಪಕ್ಷ ಸಹಕಾರ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇದಕ್ಕೆ ಸರ್ಕಾರ ಪರಿಹಾರ ಕಲ್ಪಿಸಲು, ಸಮಸ್ಯೆ ನಿವಾರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂಬ ಆಶಯ ವ್ಯಕ್ತಪಡಿಸಿದರು.