ಬೆಂಗಳೂರು:ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರ ಹೆಸರು ಅಂತಿಮಗೊಳಿಸಲು ವಿಳಂಬ ಮಾಡುತ್ತಿರುವ ಬಿಜೆಪಿ ಹೈಕಮಾಂಡ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬುಲಾವ್ ನೀಡಿದೆ. ಬೊಮ್ಮಾಯಿ ಪರ ಯಡಿಯೂರಪ್ಪ ಒಲವಿರುವ ಹಿನ್ನಲೆಯಲ್ಲಿ ಬೊಮ್ಮಾಯಿ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.
ಬೊಮ್ಮಾಯಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್, ಅಶ್ವತ್ಥನಾರಾಯಣ್, ಆರಗ ಅಶೋಕ್, ಸುನೀಲ್ ಕುಮಾರ್ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಈ ಸಂಬಂಧ ಯತ್ನಾಳ್ ಸೇರಿದಂತೆ ಹಲವರ ಜೊತೆ ಹೈಕಮಾಂಡ್ ನಾಯಕರು ಮಾತುಕತೆಯನ್ನೂ ನಡೆಸಿದ್ದಾರೆ. ರಾಜ್ಯ ನಾಯಕರ ಅಭಿಪ್ರಾಯ ಕೂಡ ಸಂಗ್ರಹಿಸಿದ್ದಾರೆ. ಆದರೂ ಹೆಸರು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.
ಪ್ರತಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಗೆ ಚಾಲನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಬಲ ಹಿಂದು ಫೈರ್ ಬ್ರ್ಯಾಂಡ್. ಸದನದಲ್ಲಿ ಪಕ್ಷವನ್ನು ಸಮರ್ಥಿಸಿಕೊಳ್ಳಬಲ್ಲರಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಅಷ್ಟೇ ಪ್ರಬಲ ಸಂಸದೀಯ ಪಟುವಲ್ಲ. ಅಲ್ಲದೇ ಯಡಿಯೂರಪ್ಪ ಯತ್ನಾಳ್ ಹೆಸರಿಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದೀಗ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರಿಗೆ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಪ್ರತಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ.