ಬೆಂಗಳೂರು:ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು ಸಿಐಡಿ (CID) ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಗೃಹ ಸಚಿವರೊಂದಿಗೆ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣವನ್ನು ಸಿಐಡಿಗೆ ಒಪ್ಪಿಸಲು ಸೂಚಿಸಿದ್ದಾರೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಚಾರ ಇದೀಗ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ.
'ವ್ಯವಸ್ಥಿತ ಪಿತೂರಿ'- ಚಲುವರಾಯ ಸ್ವಾಮಿ: ಈ ಸಂಬಂಧ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಪತ್ರದ ಬಗ್ಗೆ ತನಿಖೆಗೆ ಮನವಿ ಸಲ್ಲಿಸಿದ್ದರು. ಮನವಿ ಪತ್ರದಲ್ಲಿ ಸಚಿವರು, "ಕಳೆದ ಎರಡು ತಿಂಗಳ ಹಿಂದೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹತಾಶರಾಗಿರುವ ಕೆಲವು ರಾಜಕೀಯ ವಿರೋಧಿಗಳು ಮತ್ತು ಕಿಡಿಗೇಡಿಗಳು, ಷಡ್ಯಂತ್ರ ರೂಪಿಸಿ, ಇಲ್ಲಸಲ್ಲದ ಆರೋಪಗಳನ್ನು ಹೊರಿಸುತ್ತಿದ್ದಾರೆ. ಈ ಮೂಲಕ ಸರ್ಕಾರ ಮತ್ತು ನನ್ನ ಮೇಲೆ ಕಳಂಕ ಹಚ್ಚುವ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ" ಎಂದು ದೂರಿದ್ದಾರೆ.
"ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳ ಅನುಷ್ಠಾನದಿಂದ ಹತಾಶರಾಗಿರುವ ಕೆಲವು ನಿರುದ್ಯೋಗಿ ರಾಜಕಾರಣಿಗಳು ಸಮಾಜಕ್ಕೆ ಮಾರಕವಾಗಿರುವ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿ, ಇಲಾಖೆಯ ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಸತ್ಯಕ್ಕೆ ದೂರವಾದ ಕಪೋಲಕಲ್ಪಿತ ಕಥೆಗಳನ್ನು ಸೃಷ್ಟಿಸುತ್ತಿದ್ದಾರೆ. ನಕಲಿ ಪತ್ರಗಳನ್ನು ರಾಜ್ಯಪಾಲರು ಹಾಗೂ ಇನ್ನಿತರ ಸಾಂವಿಧಾನಿಕ ಸಂಸ್ಥೆಗಳಿಗೆ ಸಲ್ಲಿಸಿ, ಕುಚೋದ್ಯದ ನಡವಳಿಕೆ ಪದರ್ಶಿಸುತ್ತಿದ್ದಾರೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕ. ಇಲ್ಲವಾದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನಪರವಾಗಿ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸುವುದು ಕಷ್ಟ" ಎಂದು ಸಚಿವರು ಮನವಿ ಮಾಡಿದ್ದರು.