ಬೆಂಗಳೂರು: ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಹಾಗೂ 8,100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4,244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಉದ್ದೇಶಕ್ಕಾಗಿ 268.98 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್, ಪ್ರಧಾನಿ ನರೇಂದ್ರ ಮೋದಿ ಅವರ ಪೋಷಣ್ ಮಾಸಾಚರಣೆಯ ಘೋಷಣೆಯ ಬೆನ್ನಲ್ಲೇ ಈ ಅಧಿಕೃತ ಆದೇಶ ಹೊರಡಿಸಿರುವುದು ಬಹಳ ಸಂತಸದ ವಿಷಯವಾಗಿದೆ.
ಕರ್ನಾಟಕ ಅಂಗನವಾಡಿ ಮತ್ತು ಪೋಷಣ್ ಅಭಿಯಾನ 2.0 ಎಂದು ಮರುನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯನ್ನು 1975 ರಲ್ಲಿ ಪ್ರಾರಂಭಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಈ ಯೋಜನೆಯ ಅಡಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ.