ಕರ್ನಾಟಕ

karnataka

By ETV Bharat Karnataka Team

Published : Dec 30, 2023, 5:02 PM IST

ETV Bharat / state

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ ಬೆನ್ನಲ್ಲೇ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಶಿವಮೊಗ್ಗ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡು ಮಾರ್ಗಸೂಚಿ ಹೊರಡಿಸಿದೆ.

Etv Bharat
Etv Bharat

ಬೆಂಗಳೂರು:ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸದಿರುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಮಾರ್ಗಸೂಚಿ ಹೊರಡಿಸಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇತ್ತೀಚಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಸ್ವಚ್ಛತೆ ಮಾಡಿಸುತ್ತಿರುವ ಕುರಿತು ಸರ್ಕಾರ ಎಚ್ಚೆತ್ತುಕೊಂಡಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಯ ಕರ್ತವ್ಯವಾಗಿರುತ್ತದೆ. ಆದರೆ ಅವರು ಈ ಹೊಣೆಗಾರಿಕೆಯನ್ನು ಮರೆತು ವಿದ್ಯಾರ್ಥಿಗಳನ್ನು ಸ್ವಚ್ಛತೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಆಕ್ಷೇಪಣೀಯ ಮತ್ತು ಖಂಡನೀಯ. ಇಂತಹ ಘಟನೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸುವ ಕುರಿತು ಕೆಲ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿದೆ.

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಲು ಹಾಗೂ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಸಂಬಂಧಿಸಿದ ಎಲ್ಲಾ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಇಲಾಖೆ ಸೂಚನೆಗಳೇನು?:

  • ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯ ಮತ್ತು ನಿರ್ವಹಣೆಯನ್ನು ಯಾವುದೇ ಕಾರಣಕ್ಕೂ ಸಹ ವಿದ್ಯಾರ್ಥಿಗಳಿಂದ ಕೈಗೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
  • ಉಲ್ಲೇಖಿತ ಸುತ್ತೋಲೆಯ ಅನುಸಾರ ಶಾಲಾ ನಿರ್ವಹಣಾ ಅನುದಾನವನ್ನು ಆಯಾ ಸರ್ಕಾರಿ ಶಾಲೆಗಳಿಗೆ ಪ್ರಸ್ತುತ ಸಾಲಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಸದರಿ ಅನುದಾನವನ್ನು ಪ್ರಥಮ ಪ್ರಾಶಸ್ತ್ಯದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್​​ಡಿಎಂಸಿ) ಗಳ ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು.
  • ಒಂದು ವೇಳೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಸಿಬ್ಬಂದಿಯು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಗಾಗಿ ಬಳಸಿಕೊಂಡಲ್ಲಿ ಅಂತಹವರ ಮೇಲೆ ಇಲಾಖಾ ವತಿಯಿಂದ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಹಾಗೂ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.
  • ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್​ಡಿಎಂಸಿ)ಗಳು ವಿದ್ಯಾರ್ಥಿಗಳಿಗೆ ಈ ಕುರಿತು ಅರಿವು ಮೂಡಿಸತಕ್ಕದ್ದು ಹಾಗೂ ಯಾವುದೇ ವಿದ್ಯಾರ್ಥಿಗಳು ಶಾಲಾ ಶೌಚಾಲಯಗಳ ತೊಡಗಿಸಿಕೊಂಡಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದಾಗಿದೆ.
  • ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಬೇಕು. ಶಾಲಾ ಅವಧಿಯಲ್ಲಿ ಈ ಶೌಚಾಲಯಗಳಿಗೆ ಬೀಗ ಹಾಕದೇ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಹಾಗೂ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದಿಲ್ಲ ಎಂಬ ಅಂಶಗಳನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ.
  • ಶಾಲೆಯ ಸಂದರ್ಶನದ ವೇಳೆಯಲ್ಲಿ ಒಂದು ವೇಳೆ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದು ಗಮನಕ್ಕೆ ಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ತತ್‌ಕ್ಷಣವೇ ಕ್ರಮವಹಿಸಲು ಅನುವಾಗುವಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರಿ (ಆಡಳಿತ)ಗೆ ತಕ್ಷಣ ವರದಿ ಮಾಡಲು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಿದೆ.
  • ಇಂತಹ ಪ್ರಕರಣಗಳಲ್ಲಿ ತತ್‌ಕ್ಷಣವೇ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು (ಆಡಳಿತ) ಸಂಬಂಧಿಸಿದವರ ಮೇಲೆ ಜರೂರಾಗಿ ಕ್ರಮ ವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದಲ್ಲಿ ಅಥವಾ ನಿರ್ಲಕ್ಷ್ಯತನ ತೋರಿದಲ್ಲಿ ಮತ್ತು ಇಂತಹ ಪ್ರಕರಣಗಳು ಮರುಕಳಿಸಿದಲ್ಲಿ ಅದಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೆಶಕರು(ಆಡಳಿತ) ಅವರನ್ನೇ ನೇರ ಹೊಣೆಗಾರರನ್ನಾಗಿಸಿ ಇಲಾಖೆ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
  • ಇದೇ ರೀತಿ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸಹ ಇಂತಹ ಯಾವುದೇ ಪ್ರಕರಣಗಳು ಜರುಗದಂತೆ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿಗಳು ಹಾಗೂ ಶಾಲಾ ಮುಖ್ಯಸ್ಥರು ಎಚ್ಚರಿಕೆ ವಹಿಸಲು ತಿಳಿಸಿದೆ.

ಇದನ್ನೂ ಓದಿ: ಶಿವಮೊಗ್ಗ: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ; ಮುಖ್ಯ ಶಿಕ್ಷಕ ಅಮಾನತು

ಇದನ್ನೂ ಓದಿ: ಬೆಂಗಳೂರು: ಮಕ್ಕಳಿಂದಲೇ ಶೌಚಾಲಯ ಸ್ವಚ್ಛಗೊಳಿಸಿದ ಶಾಲಾ ಸಿಬ್ಬಂದಿ, ಪೋಷಕರ ಆಕ್ರೋಶ

ABOUT THE AUTHOR

...view details