ಬೆಂಗಳೂರು :ನಾಲ್ಕು ವರ್ಷದ ಮಗಳ ಮೇಲೆ ತಂದೆಯಿಂದಲೇ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ನಿ (ಅಪ್ರಾಪ್ತೆಯ ತಾಯಿ) ನೀಡಿದ ದೂರಿನ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಅಗತ್ಯ ದಾಖಲೆಗಳೊಂದಿಗೆ ಆರೋಪ ಪಟ್ಟಿ ಸಲ್ಲಿಸಿದ ನಗರದ ಕೋರಮಂಗಲ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ ಕ್ರಮಕ್ಕೆ ತರಾಟೆ ತೆಗೆದುಕೊಂಡಿರುವ ಹೈಕೋರ್ಟ್, ಬೇರೊಬ್ಬ ತನಿಖಾಧಿಕಾರಿಯನ್ನು ನೇಮಕ ಮಾಡಿ ಮುಂದಿನ 10 ವಾರಗಳಲ್ಲಿ ಮರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸುವಂತೆ ಸೂಚಿಸಿದೆ.
ತನಿಖಾಧಿಕಾರಿಗಳು ಹೆಚ್ಚಿನ ತನಿಖೆ ನಡೆಸಿ ಅಂತಿಮ ಆರೋಪ ಪಟ್ಟಿ ಸಲ್ಲಿಸುವಂತೆ ದೂರುದಾರೆ (ಸಂತ್ರಸ್ತೆಯ ತಾಯಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆರೋಪ ಪಟ್ಟಿಯಲ್ಲಿನ ಹಲವು ದೋಷಗಳನ್ನು ಗಮನಿಸಿ ತನಿಖಾಧಿಕಾರಿಗಳ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಮತ್ತೊಬ್ಬ ತನಿಖಾಧಿಕಾರಿಗಳು ಪ್ರಕರಣ ಸಂಬಂಧ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವವರೆಗೂ, ಈಗಾಗಲೇ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯ ಕುರಿತು ಯಾವುದೇ ಕ್ರಮಕ್ಕೆ ಮುಂದಾಗದಂತೆ ನಿರ್ದೇಶನ ನೀಡಿ ಆದೇಶಿಸಿದೆ.
ಪ್ರಕರಣ ಸಂಬಂಧ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ವಿಚಾರಣೆಗೆ ಅಗತ್ಯವಿರುವ ಹಲವು ದಾಖಲೆಗಳನ್ನು ಸಂಗ್ರಹಿಸಿಲ್ಲ. ತನಿಖಾಧಿಕಾರಿಗಳು ಉದ್ದೇಶಪೂರ್ವಕವಾಗಿ ದಾಖಲೆಗಳನ್ನು ಸಂಗ್ರಹಿಸಲು ನಿರಾಕರಿಸಿದ್ದು, ಕಳಪೆ ಮಟ್ಟದಲ್ಲಿ ತನಿಖೆ ನಡೆಸಿದ್ದಾರೆ ಎಂದು ಪೀಠ ತಿಳಿಸಿದೆ.
ಆರೋಪ ಪಟ್ಟಿಯಲ್ಲಿ ಲೋಪ:ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹಲವು ದೋಷಗಳಿದ್ದು, ಅದನ್ನು ಅರ್ಥ ಮಾಡಿಕೊಳ್ಳದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಕರಣದ ಸಂತ್ರಸ್ಥೆ (ಮಗು)ಯ ಹೇಳಿಕೆಯಲ್ಲಿ ಆರೋಪಿಯ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಅಂಶವನ್ನು ಆರೋಪ ಪಟ್ಟಿಯಲ್ಲಿ ಸೇರಿಸಬೇಕಾಗಿತ್ತು. ಆದರೆ, ತನಿಖಾಧಿಕಾರಿಗಳು ಈ ಅಂಶವನ್ನು ಆರೋಪ ಪಟ್ಟಿಯಲ್ಲಿ ಕೈಬಿಟ್ಟಿದ್ದು, ಉದ್ದೇಶಪೂರ್ವಕವಾಗಿ ಆರೋಪಿಯ ವಿರುದ್ಧ ದೋಷಾರೋಪಣೆ ಮಾಡಲು ನಿರ್ಲಕ್ಷಿಸಿದ್ದಾರೆ ಎಂದು ಕೋರ್ಟ್ ಹೇಳಿದೆ.
ಅಲ್ಲದೆ, ಸಂತ್ರಸ್ಥೆ ವೈದ್ಯರ ಮುಂದೆ ನೀಡಿರುವ ಹೇಳಿಕೆಗಳು ಹಾಗೂ ದೂರುದಾರರಾದ ಪತ್ನಿಯ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿಲ್ಲ. ಅಶ್ಲೀಲ ವಿಡಿಯೋಗಳುಳ್ಳ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ನನ್ನು ವಶಕ್ಕೆ ಪಡೆದುಕೊಂಡಿಲ್ಲ. ಆ ಸಂಬಂಧ ವಿಚಾರಣೆ ನಡೆಸಿಲ್ಲ. ಜೊತೆಗೆ, ಐಪ್ಯಾಡ್ನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. ಆ ಸಂಬಂಧ ಈವರೆಗೂ ವರದಿ ಲಭ್ಯವಾಗಿಲ್ಲ. ಆದರೂ ಅಂತಿಮ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳ ಬಳಕೆಯ ಸ್ಥಳವನ್ನೂ ಉಲ್ಲೇಖಿಸಿಲ್ಲ. ಪತಿಯ ಕೃತ್ಯಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯ ದೂರುದಾರರ ತಾಯಿ, ಅಜ್ಜಿಯನ್ನು ವಿಚಾರಣೆ ನಡೆಸಿಲ್ಲ. ಜೊತೆಗೆ, ಯಾವುದೇ ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡಿಲ್ಲ. ಹಾಗೂ ಮಗು ಅನುಭವಿಸಿರುವ ಮಾನಸಿಕ ಹಿಂಸೆಗೆ ಸಂಬಂಧಿಸಿದಂತೆ ಮನೋಶಾಸ್ತ್ರಜ್ಞರ ಹೇಳಿಕೆಯನ್ನೂ ಆರೋಪ ಪಟ್ಟಿಯಲ್ಲಿ ಸೇರಿಸಿಲ್ಲ ಎಂದು ತಿಳಿಸಿರುವ ಪೀಠ, ಮರು ತನಿಖೆಗೆ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ:ಬೆಂಗಳೂರಿನ ನಿವಾಸಿಗಳಾಗಿದ್ದ ದಂಪತಿಗೆ ನಾಲ್ಕು ವರ್ಷದ ಮಗಳಿದ್ದರು. ಈ ಮಗಳೊಂದಿಗೆ ತಂದೆ ಬೆತ್ತಲೆ ಪೋಟೋ ತೆಗೆಸಿಕೊಳ್ಳುವುದು ಮತ್ತು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿ ಖಾಸಗಿ ಅಂಗಗಳನ್ನು ಸ್ಪರ್ಶಿಸುತ್ತಿದ್ದರು. ಮಗುವಿನ ಸಮ್ಮುಖದಲ್ಲಿಯೇ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸುತ್ತಿದ್ದರು. ಜೊತೆಗೆ, ಮಗು ಬಳಕೆ ಮಾಡುವ ಐಪ್ಯಾಡ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿದ್ದು, ಅವುಗಳನ್ನು ವೀಕ್ಷಣೆ ಮಾಡುವಂತೆ ಒತ್ತಾಯಿಸುತ್ತಿದ್ದರು. ತನ್ನ ಪತಿ ವಿಕೃತನಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಪತ್ನಿ 2022ರ ಆಗಸ್ಟ್ ತಿಂಗಳಲ್ಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
ದೂರಿಗೆ ಸಂಬಂಧಿಸಿದಂತೆ ಪತಿಯ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಆಕ್ಟೋಬರ್ 2022ರಲ್ಲಿ ಸೆಷನ್ಸ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ತನಿಖೆಯಲ್ಲಿ ಹಲವು ಲೋಪಗಳಿದ್ದು, ಮರು ತನಿಖೆ ನಡೆಸುವಂತೆ ದೂರುದಾರರು ಸಲ್ಲಿಸಿದ್ದ ಅರ್ಜಿಯನ್ನು ನಗರದ ತ್ವರಿತಗತಿಯ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ಪಿಎಸ್ಐ ಅಕ್ರಮ: ಕೆಲವರು ಮಾಡಿದ ತಪ್ಪಿಗೆ ಇಡೀ ಪರೀಕ್ಷೆ ರದ್ದು ಮಾಡುವ ಅಗತ್ಯವಿಲ್ಲ- ಪ್ರಾಮಾಣಿಕ ಅಭ್ಯರ್ಥಿಗಳ ಪರ ವಕೀಲರ ವಾದ