ಬೆಂಗಳೂರು/ನವದೆಹಲಿ: ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿʼ ಸ್ತಬ್ಧಚಿತ್ರವು ಸಂಪೂರ್ಣವಾಗಿ ಸಿದ್ಧಗೊಂಡಿದೆ. ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ.
ವಾರ್ತಾ ಇಲಾಖೆಯು ದೆಹಲಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಪರವಾಗಿ ಸ್ತಬ್ಧಚಿತ್ರದೊಂದಿಗೆ ಪ್ರತಿ ಬಾರಿಯೂ ಪಾಲ್ಗೊಳ್ಳುತ್ತದೆ. ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ವಾರ್ತಾ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 14 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ಸಂತಸ ಹಂಚಿಕೊಂಡಿದ್ದಾರೆ.
2023ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು 1. ಕರ್ನಾಟಕದ ಮಹಿಳೆಯರ ಶೌರ್ಯ, 2. ರೇಷ್ಮೆ ಕರ್ನಾಟಕದ ಹೆಮ್ಮೆ 3. ಕರ್ನಾಟಕದ ಪುಷ್ಪೋದ್ಯಮ 4. ಕರ್ನಾಟಕ : ಸಿರಿಧಾನ್ಯದ ನಾಯಕ ಮತ್ತು 5.ʼನಾರಿ ಶಕ್ತಿʼ ಎಂಬ ಐದು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು. ಇದರಲ್ಲಿ ಸ್ತ್ರೀ ಸಬಲೀಕರಣವನ್ನು ಬಿಂಬಿಸುವ ʼನಾರಿ ಶಕ್ತಿʼ ವಿಷಯವನ್ನು ʼವಿಷಯ ಆಯ್ಕೆಯ ಪರಿಣತರ ತಂಡ ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದ ಮೂವರು ಮಹಿಳಾ ಸಾಧಕಿಯರ ಸಾಧನೆಯನ್ನು ಪ್ರದರ್ಶಿಸುತ್ತಿರುವುದಾಗಿ ಆಯುಕ್ತರು ತಿಳಿಸಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವʼದ ಅಂಗವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಸಾಧನೆಗಳನ್ನು 'ನಾರಿ ಶಕ್ತಿ' (ವುಮೆನ್ ಪವರ್) ಹೆಸರಿನಲ್ಲಿ ರಾಜ್ಯವು 2023ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಪ್ರಸ್ತುತ ಪಡಿಸಿದೆ. ವಿಷಯ ಆಯ್ಕೆಯ ಬಳಿಕ, ಸ್ತಬ್ಧಚಿತ್ರದ ಮಾದರಿ (ಕೀ ಮಾಡಲ್) ಮತ್ತು ಸಂಗೀತದ ಹಂತವನ್ನು ದಾಟಬೇಕಾಗಿತ್ತು. ಅಂತಾರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು.