ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾರ್ಭಟ ಬೆಂಗಳೂರು:ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು, ಕೋಲಾರ, ಶ್ರೀನಿವಾಸಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಕಡೆ ರಾತ್ರಿಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತವರಣವಿತ್ತು. ನಂತರ ಜೋರು ಮಳೆ ಆರಂಭವಾಗಿದೆ. ಅದೇ ರೀತಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚನ್ನಪಟ್ಟಣದ ಮತ್ತಿತರ ಕಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಬೀಳುತ್ತಿರುವ ಜಿಟಿ ಮಳೆ ಶಾಲಾ ಮಕ್ಕಳು ಹಾಗೂ ಕೆಲಸಕ್ಕೆ ಹೋಗುವವರಿಗೆ ಅಡ್ಡಿಯಾಗಿದೆ.
ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಜೆ.ಸಿ ರಸ್ತೆ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್, ಹೆಬ್ಬಾಳ, ಶಾಂತಿ ನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವೆಡೆ ಜೋರು ಮಳೆಯಿಂದಾಗಿ ಭಾರಿ ಟ್ರಾಫಿಕ್ ಉಂಟಾಗಿದೆ. ಬೈಕ್ ಸವಾರರು ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ. ನಗರದ ಬಹುತೇಕ ಅಂಡರ್ ಪಾಸ್ಗಳಲ್ಲಿ ಬೈಕ್ ಸವಾರರು ಆಶ್ರಯ ಪಡೆಯುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಜಧಾನಿ ಬೆಂಗಳೂರಿನ ಕೆಲ ಕಡೆ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಅಬ್ಬರಿಸಿದೆ.
ವಾಹನ ಸವಾರರಿಗೆ ಕಿರಿಕಿರಿ : ರಾಜಧಾನಿಯಲ್ಲಿ ಇಂದು ಬೆಳಗ್ಗೆ 9:30ರ ನಂತರ ಮಳೆ ತುಸು ಜೋರಾಗಿ ಅಬ್ಬರಿಸಿದೆ. ಬಸವನಗುಡಿ, ಕಾರ್ಪೊರೇಷನ್, ಕೆ.ಆರ್ ಮಾರುಕಟ್ಟೆ, ಜಯನಗರ, ರಾಜಾಜಿನಗರ, ಹೆಬ್ಬಾಳ, ಮೆಜೆಸ್ಟಿಕ್, ಸದಾಶಿವನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ವಿಧಾನಸೌಧ ಸುತ್ತಮುತ್ತ ಮಳೆಯ ದರ್ಶನವಾಗಿದೆ. ಮಳೆಯಿಂದಾಗಿ ನಗರದ ಅನೇಕ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ಬೆಳಗ್ಗೆ ಕೆಲಸಕ್ಕೆ ತೆರಳುವವರಿಗೆ ವರುಣನ ಸಿಂಚನದಿಂದ ಕೊಂಚ ಸಮಸ್ಯೆಯಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಮುಂದಿನ 4 ದಿನ ಮಳೆಯಾಗುವ ಸಾಧ್ಯತೆ: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗಾಳಿಯ ವೇಗ ಗಂಟೆಗೆ 40 ಕಿ.ಮೀ ವೇಗದಲ್ಲಿ ಬೀಸಲಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಭಾಗದಲ್ಲಿಯೂ ಮಳೆ ಅಬ್ಬರ ಜೋರಾಗಿದೆ. ಬಹುತೇಕ ಕಡೆ ಬಿಸಿಲಿನ ಪ್ರಮಾಣ ಇಳಿಕೆಯಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಬಿಡದೇ ಮಳೆ ಸುರಿಯುತ್ತಿರುವುದರಿಂದ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ವರುಣನಾರ್ಭಟ: ಬಿಜೆಪಿ ಪ್ರತಿಭಟನೆ ರದ್ದು..ಕಾಂಗ್ರೆಸ್ ಪ್ರತಿಭಟನೆಗೆ ಮಳೆ ಅಡ್ಡಿ!