ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟವನ್ನ ಕೊರೊನಾ ಬೆಂಬಿಡದೇ ಕಾಡುತ್ತಿದೆ. ನಿನ್ನೆಯಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಕೊರೊನಾ ಸೋಂಕಿಗೆ ಒಳಗಾದ ಬೆನ್ನಲ್ಲೇ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಕೊರೊನಾ ಸೋಂಕಿಗೊಳಗಾಗಿದ್ದಾರೆ.
ತಮಗೆ ಕೊರೊನಾ ಸೋಂಕು ತಗುಲಿರುವ ವಿಷಯವನ್ನ ಖುದ್ದಾಗಿ ಸಚಿವ ಕೆ.ಎಸ್.ಈಶ್ವರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ. ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.
ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗುವಂತೆ ಸಿಎಂ ಯಡಿಯೂರಪ್ಪ ಹಾರೈಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಮತ್ತು ನನ್ನ ಆತ್ಮೀಯ ಕೆ.ಎಸ್.ಈಶ್ವರಪ್ಪ ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಮತ್ತೆ ತಮ್ಮ ಎಂದಿನ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.
ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಜತೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶ್ರೀಘ್ರವಾಗಿ ಅವರು ಗುಣಮುಖರಾಗಲಿ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹಾರೈಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪ, ಶ್ರೀರಾಮುಲು, ಡಾ. ಸುಧಾಕರ್, ಪ್ರತಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗಿದ್ದಾರೆ.