ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸುವ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಧ್ವನಿಮತದ ಮೂಲಕ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ವಿಧೇಯಕವನ್ನು ಮಂಡಿಸಿ, ಅದರ ಉದ್ದೇಶಗಳನ್ನು ವಿವರಿಸಿ ಅಂಗೀಕಾರ ಪಡೆದುಕೊಂಡರು.
ಹೊಸ ಶಿಕ್ಷಣ ನೀತಿ ಅನ್ವಯ ಎರಡು ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎಂದು ನಾಮಕರಣ ಮಾಡಲಾಗಿದೆ. ಹೊಸ ಶಿಕ್ಷಣ ನೀತಿಯನ್ವಯ ವಿಧೇಯಕವನ್ನು ತರಲಾಗಿದೆ. ಪಿಯುಸಿ ನಿರ್ದೇಶಕರಿಗೆ ಪರೀಕ್ಷೆ ಕಡೆ ಗಮನಹರಿಸಿಕೊಂಡು ಆಡಳಿತ ಮತ್ತು ಶೈಕ್ಷಣಿಕ ಚಟುವಟಿಕೆಗಳ ಕಡೆಯೂ ನೋಡಬೇಕಿದೆ.
ಇದರಿಂದ ಗುಣಮಟ್ಟದ ಶಿಕ್ಷಣ ನೀಡಲು ಕಷ್ಟಕರವಾಗಿದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ಒಗ್ಗೂಡಿಸಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಮಾಡಲಾಗಿದೆ. ಮಂಡಳಿಗೆ ಒಬ್ಬರು ಐಎಎಸ್ ಅಧಿಕಾರಿಯನ್ನು ನೇಮಿಸಲಾಗಿದೆ. ಇದರಿಂದ ನಿರ್ದೇಶಕರು ಶೈಕ್ಷಣಿಕ ಚಟುವಟಿಕೆಗಳತ್ತ ಹೆಚ್ಚಿನ ಗಮನಹರಿಸಿ ಉತ್ತಮ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.