ಬೆಂಗಳೂರು: ಡಿ. 15ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆದಿರುವ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಸಲ್ಲಿಸಿರುವ ತಕರಾರು ಅರ್ಜಿಯು ಅಂತಿಮ ತೀರ್ಪಿಗೆ ಒಳಪಟ್ಟಿರಲಿದೆ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಚುನಾವಣೆಯಲ್ಲಿ ಸಂಘದ ಬೈಲಾ ಉಲ್ಲಂಘಿಸಲಾಗಿದೆ ಎಂದು ಆಕ್ಷೇಪಿಸಿ ಪೊಲೂರು ಮುರಳೀಧರ ಮತ್ತಿತರರು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ, ಈ ಕುರಿತು ಮಧ್ಯಂತರ ಆದೇಶ ನೀಡಿದೆ.
ಓದಿ:ಹೆಚ್ಡಿಕೆ, ಡಿಕೆಶಿ, ಪರಮೇಶ್ವರ್ಗೆ ರಿಲೀಫ್: ಎಫ್ಐಆರ್ ರದ್ದುಪಡಿಸಿದ ಹೈಕೋರ್ಟ್
ಹಾಗೆಯೇ ಅರ್ಜಿ ಸಂಬಂಧ ಡಿಪಿಎಆರ್ ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಹಕಾರಿ ಇಲಾಖೆಗಳ ಪ್ರಧಾನ ಕಾರ್ಯದರ್ಶಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾಧಿಕಾರಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿರುವ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಚಳಿಗಾಲದ ರಜೆಯ ನಂತರಕ್ಕೆ ಮುಂದೂಡಿದೆ. ಇದೇ ವೇಳೆ ಚುನಾವಣೆ ಫಲಿತಾಂಶ ತಕರಾರು ಅರ್ಜಿಯ ಅಂತಿಮ ತೀರ್ಪಿಗೆ ಒಳಪಡಲಿದೆ ಎಂದು ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ: ಸಂಘದ 2020-25ರ ಆಡಳಿತಾವಧಿಗೆ ನಡೆದ ಚುನಾವಣೆಯಲ್ಲಿ ಮತ ಚಲಾಯಿಸಲು ಮತದಾರರ ಪಟ್ಟಿಗೆ 6ರಿಂದ 8ನೇ ತರಗತಿಯ ಶಿಕ್ಷಕರನ್ನು ಸಹ ಸೇರಿಸಲಾಗಿದೆ. ಇದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಲಾದ ನಿಯಮ 4(ಎ) ಉಲ್ಲಂಘನೆ. ಹೀಗಾಗಿ ಚುನಾವಣಾ ಫಲಿತಾಂಶವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಸಂಘಕ್ಕೆ ಡಿ. 15ರಂದು ಚುನಾವಣೆ ನಡೆದಿದ್ದು, 21ರಂದು ಫಲಿತಾಂಶ ಪ್ರಕಟಿಸಲಾಗಿದೆ.