ಬೆಂಗಳೂರು:ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೊಟೀನ್ ಕೊರತೆಯಿಂದ ಬಳಲುತ್ತಿರುವ ಆರರಿಂದ 15 ವರ್ಷದೊಳಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ವಿದ್ಯಾರ್ಥಿಗಳು ಕೊರತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದರಿಂದ ಕಾರ್ಯಕ್ರಮದ ಅಡಿ ಪ್ರಯೋಜನ ಪಡೆಯಲಿದ್ದಾರೆ.
ಡಿಸೆಂಬರ್ 1ರಿಂದ ಕಾರ್ಯಕ್ರಮ ಆರಂಭ:ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ಒಂದರಿಂದ 8ನೇ ತರಗತಿವರೆಗೆ ಓದುತ್ತಿರುವ 14,44,322 ವಿದ್ಯಾರ್ಥಿಗಳು ಫಲಾನುಭವಿಗಳಾಗಲಿದ್ದಾರೆ. ಡಿಸೆಂಬರ್ 1ರಿಂದ ಪ್ರಾರಂಭವಾಗುವ ಕಾರ್ಯಕ್ರಮವು ಮಾರ್ಚ್ 2022ರವರೆಗೆ ಮುಂದುವರೆಯಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.