ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಜೋರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ 9ರವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬೀಳಲಿದೆ. ಮೀನುಗಾರಿಕೆಗೆ ತೆರಳುವವರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ. ಹೀಗಾಗಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿಗೂ ಮಳೆ ಆತಂಕ:ದಕ್ಷಿಣ ಒಳನಾಡು ಕರಾವಳಿ ಮತ್ತು ಮಲೆನಾಡು ಭಾಗ ಮಾತ್ರವಲ್ಲದೇ ಬೆಂಗಳೂರಿನಲ್ಲಿಯೂ ಸಪ್ಟೆಂಬರ್ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಕಳೆದ ಒಂದೆರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಗಳು ಸಂಪೂರ್ಣ ಹಾಳಾಗಿವೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.