ಬೆಂಗಳೂರು: ವಾಯುಭಾರ ಕುಸಿತ, ಮೇಲ್ಮೈ ಸುಳಿಗಾಳಿಯಿಂದಾಗಿ ಏಕಕಾಲಕ್ಕೆ ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಎರಡೂ ಕಡೆ ವಾಯುಭಾರ ಕುಸಿತ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಈಟಿವಿ ಭಾರತದ ಜತೆ ಮಾತನಾಡಿರುವ ಅವರು, ಅಕ್ಟೋಬರ್ನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಸಾಮಾನ್ಯವಾಗಿ ಈ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ 170 ಮಿಲಿ ಮೀಟರ್‌ನಷ್ಟು ಮಳೆ ಬರಬೇಕಾಗಿತ್ತು. ಆದರೆ ಈ ಬಾರಿ 365 ಮಿ.ಮೀ ಮಳೆಯಾಗಿದೆ. ಹೆಚ್ಎಎಲ್ನಲ್ಲಿ 375 ಮಿ.ಮೀ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 400 ಮಿ.ಮೀ ಮಳೆಯಾಗಿದೆ ಎಂದರು.
ತಮಿಳುನಾಡು, ಲಕ್ಷ ದ್ವೀಪದಲ್ಲಿ ಮೇಲ್ಮೈ ಸುಳಿಗಾಳಿ
ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಕಂಡು ಬಂದಿದ್ದು, 1.5 ಕಿ.ಮೀ ಎತ್ತರದ್ಲಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅದರಲ್ಲೂ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಧಾರಾಕಾರ ಮಳೆಯಾಗಿದೆ ಎಂದು ಹೇಳಿದರು.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
7 ಮಿ.ಮೀ.ಗಿಂತ ಜಾಸ್ತಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದೇವೆ. ನಾಳೆಯಿಂದ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ರಾಮನರದಲ್ಲಿ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಿದರು.