ಬೆಂಗಳೂರು : ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ :
ಉತ್ತರ ಒಳನಾಡಿನಲ್ಲಿ ಅ.13, 14, 15 ರಂದು ವ್ಯಾಪಕ ಮಳೆಯಾಗಲಿದೆ. ಅ.16 ಮತ್ತು17 ರಂದು ಮಳೆ ಪ್ರಮಾಣ ತಗ್ಗಲಿದ್ದು, ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಅ. 13 (ಇಂದು) ರಂದು ಉತ್ತರ ಕರ್ನಾಟಕದ ಪೂರ್ವ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ.
ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ :
ಉತ್ತರ ಆಂಧ್ರ ಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದ, ಗಾಳಿಯ ವೇಗ ಪ್ರತೀ ಗಂಟೆಗೆ 55 ರಿಂದ 65 ಕಿ.ಮೀ ಇದೆ. ಇನ್ನೊಂದೆಡೆ ಪೂರ್ವ ಪಶ್ಚಿಮವಾಗಿ ಟ್ರಫ್ ನಿರ್ಮಾಣವಾಗಿದೆ. ಇವುಗಳ ಪ್ರಭಾವದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ. 13 ರಿಂದ 14 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಅ. 16 ಮತ್ತು 17 ರಂದು ಕೂಡ ಮಳೆ ಮುಂದುವರೆಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಅ.15 ರಂದು ಯಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ :
ದಕ್ಷಿಣ ಒಳನಾಡಿನಲ್ಲಿ ಅ. 13 ಮತ್ತು 15 ರಂದು ವ್ಯಾಪಕ ಮಳೆಯಾಗಲಿದ್ದು, ಅ. 17 ರವರೆಗೆ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದೆ. ಅ. 13 ( ಇಂದು) ರಂದು ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಹಾಗೂ ನಾಳೆ ಯಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಮಾನ್ಸೂನ್ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದ್ದು, ಬಾದಾಮಿಯಲ್ಲಿ 8 ಸೆಂ.ಮೀ, ಕುಷ್ಟಗಿ, ಸುಬ್ರಹ್ಮಣ್ಯ, ಆಗುಂಬೆಯಲ್ಲಿ 7 ಸೆಂ.ಮೀ ಮಳೆಯಾಗಿದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.