ಬೆಂಗಳೂರು:ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಜನ ಸಾಮಾನ್ಯರ ಅಗತ್ಯ ದಿನಸಿ ಪದಾರ್ಥಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ ನಗರದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂಭಾಗ ಆರಂಭವಾಗಿದೆ.
ಕೇಂದ್ರದ ಬೆಲೆ ಏರಿಕೆ ನಿಲುವಿಗೆ ಖಂಡನೆ: ಮಹಿಳಾ ಕಾಂಗ್ರೆಸ್ನಿಂದ ಪ್ರತಿಭಟನೆ ಬೆಂಗಳೂರು ರೈಲು ನಿಲ್ದಾಣ ಸಮೀಪದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಮೌರ್ಯ ವೃತ್ತದ ಗಾಂಧಿ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂಭಾಗ ಜಮಾವಣೆಗೊಂಡ ಮಹಿಳಾ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಭಾರಿ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಧಿಕ್ಕಾರ ಕೂಗಿದರು.
ಮಹಿಳಾ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಹಾಲಿ ಹಾಗೂ ಮಾಜಿ ಸಂಸದರು, ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ಮಾಜಿ ಬಿಬಿಎಂಪಿ ಸದಸ್ಯರು, ಮಹಿಳಾ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂಬ ನಿರೀಕ್ಷೆಯಿದೆ.
ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಹಾಗೂ ಸಲೀಂ ಅಹ್ಮದ್ ಆಗಮಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸುವ ನಿರೀಕ್ಷೆಯಿದ್ದು, ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಕಾರ್ಯಕರ್ತೆಯರು ಇವರ ನೇತೃತ್ವದಲ್ಲಿ ಮೌರ್ಯ ವೃತ್ತದವರೆಗೂ ಮೆರವಣಿಗೆ ನಡೆಸಲಿದ್ದಾರೆ.