ಬೆಂಗಳೂರು:ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ರಾಜ್ಯಸಭೆಗೆ ಬಹುತೇಕ ಅವಿರೋಧವಾಗಿ ಆಯ್ಕೆಯಾಗಿದ್ದು, ಡಿ. 5ರಂದು ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.
ರಾಜ್ಯಸಭೆ ಉಪ ಚುನಾವಣೆ ಸಂಬಂಧ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಆದರೆ ಇಂದು ಯಾರೂ ನಾಮಪತ್ರ ಸಲ್ಲಿಸಿಲ್ಲ. ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸೇರಿ ಮೂರು ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ, ಈವರೆಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿಯಿಂದ ಕೆ.ಸಿ.ರಾಮಮೂರ್ತಿ ನಾಮಪತ್ರ ಸಲ್ಲಿಕೆ ಮಾಡಿದ್ದರೆ, ಉಳಿದಂತೆ ಸ್ವತಂತ್ರ ಅಭ್ಯರ್ಥಿಯಾಗಿ ಡಾ. ಕೆ.ಪದ್ಮರಾಜ ಮತ್ತು ಹಿಂದುಸ್ತಾನ್ ಜನತಾ ಪಾರ್ಟಿಯಿಂದ ಶ್ರೀವೆಂಕಟೇಶ್ವರ ಮಹಾಸ್ವಾಮಿ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ. ಬೇರೆ ಯಾವುದೇ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿಲ್ಲ ಎಂದು ವಿವರಿಸಿದರು.
ರಾಜ್ಯಸಭೆಗೆ ಕೆ.ಸಿ.ರಾಮಮೂರ್ತಿ ಅವಿರೋಧ ಆಯ್ಕೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು 10 ಮಂದಿ ಅನುಮೋದಕರ ಸಹಿ ಹಾಕುವುದು ಕಡ್ಡಾಯವಾಗಿದೆ. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಿಗೆ ಅನುಮೋದಕರು ಸಹಿ ಹಾಕಿಲ್ಲ. ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿಗೆ ಹತ್ತು ಮಂದಿ ಅನುಮೋದಕರು ಸಹಿ ಹಾಕಿದ್ದಾರೆ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಸಮರ್ಪಕವಾಗಿರದಿದ್ದರೆ ಅಂತವರ ನಾಮಪತ್ರ ತಿರಸ್ಕರಿಸಲಾಗುತ್ತದೆ. ನಾಮಪತ್ರ ಹಿಂಪಡೆಯಲು ಡಿಸೆಂಬರ್ 5 ಕಡೇ ದಿನವಾಗಿದೆ. ಅಂದು ಅಂತಿಮ ಘೋಷಣೆ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕೆ.ಸಿ.ರಾಮಮೂರ್ತಿ ಬಹುತೇಕ ಅವಿರೋಧ ಆಯ್ಕೆಯಾಗಿದ್ದು, ಹೀಗಾಗಿ ಡಿಸೆಂಬರ್ 12ಕ್ಕೆ ರಾಜ್ಯಸಭೆ ಉಪ ಚುನಾವಣೆ ನಡೆಸುವ ಅಗತ್ಯ ಇರುವುದಿಲ್ಲ ಎನ್ನಲಾಗುತ್ತಿದೆ.