ಬೆಂಗಳೂರು: ಕನ್ನಡ ಕಲಿಕೆ ಕಡ್ಡಾಯಗೊಳಿಸಿದ ರಾಜ್ಯ ಸರಕಾರದ ಆದೇಶಕ್ಕೆ ನೀಡಲಾಗಿರುವ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಸೋಮವಾರ ಹೈಕೋರ್ಟ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಕನ್ನಡ ಕಲಿಕೆ ಕಡ್ಡಾಯ ನೀತಿಗೆ ವಿರೋಧ ವ್ಯಕ್ತಪಡಿಸಿರುವ ಅರ್ಜಿದಾರರಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ ತಿಂಗಳಿಗೆ ಮುಂದೂಡಿದೆ.
ಪದವಿ ಹಂತದ ತರಗತಿಗಳಲ್ಲಿ ಒಂದು ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿದ ಸರಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕರ ಸಂಘ ಸೇರಿದಂತೆ ಇತರ ಸಂಘ ಸಂಸ್ಥೆಗಳು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.