ಬೆಂಗಳೂರು:ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಬರೆದ ಪತ್ರದಲ್ಲಿ ಈ ಆಗ್ರಹ ಮಾಡಿರುವ ಅವರು, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅನಾಮಧೇಯ ಜೀವ ಬೆದರಿಕೆ ಕರೆ ಬಂದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಜೀವ ಬೆದರಿಕೆ ಕರೆ ವಿಚಾರವಾಗಿ ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಈಗಾಗಲೇ ದೂರು ನೀಡಲಾಗಿದೆ.
ಬಿ.ಎಸ್ ಯಡಿಯೂರಪ್ಪಗೆ ಬರೆದಿರುವ ಪತ್ರ ಗೃಹ ಸಚಿವಾಲಯ ಹಾಗೂ ಸರ್ಕಾರ ಅನಾಮಧೇಯ ಕರೆ ಕುರಿತು ಕೂಡಲೇ ತನಿಖೆ ನಡೆಸಿ, ಬೆದರಿಕೆ ಹಾಕುವವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷಕ್ಕಷ್ಟೇ ಅಲ್ಲದೇ ಈ ದೇಶ ಕಂಡ ಹಿರಿಯ ರಾಜಕೀಯ ಧುರೀಣರು. ಕೇಂದ್ರ ಹಾಗೂ ರಾಜ್ಯ ಮಂತ್ರಿಗಳಾಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಅಂತಹ ಹಿರಿಯ ನಾಯಕರು ಹಾಗೂ ಅವರ ಕುಟುಂಬ ಸದಸ್ಯರಿಗೆ ಬಂದಿರುವ ಜೀವ ಬೆದರಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.