ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಕೃಷಿ ಕಾಯ್ದೆ ವಿರೋಧಿಸಿ ನಡೆಯಲಿರುವ ಬಂದ್ಗೆ ಬೆಂಬಲ ವ್ಯಕ್ತಪಡಿಸಿರುವ ಕರ್ನಾಟಕ ಕಿಸಾನ್ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ, ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ನಿಂದ ಸಂಪೂರ್ಣ ಬೆಂಬಲ ಸೂಚಿಸಿದ್ದೇವೆ. ಜಿಲ್ಲೆಯಾಧ್ಯಂತ ಜಿಲ್ಲಾ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು ಆಯಾ ನಗರಕ್ಕೆ ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ.
ಒಂದೊಮ್ಮೆ ಅದಕ್ಕೆ ಅವಕಾಶ ಸಿಗದಿದ್ದರೆ, ಆಯಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಾವು ವಿನೂತನ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು, ಕಿಸಾನ್ ಪದಾಧಿಕಾರಿಗಳು ಕಾಯ್ದೆ ವಿರೋಧಿಸಿ ಅರೆಬೆತ್ತಲೇ ಚಳುವಳಿ ಹಮ್ಮಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಬೆಳಗ್ಗೆ 10:30ಕ್ಕೆ ಪದಾಧಿಕಾರಿಗಳು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಲಿದ್ದಾರೆ. ಇಲ್ಲಿಯೇ ನಾವು ಅರೆಬೆತ್ತಲೆ ಚಳುವಳಿ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಕರೆಯುವ ಪ್ರತಿಯೊಂದು ಹೋರಾಟದಲ್ಲಿಯೂ ಕಾಂಗ್ರೆಸ್ ಪಕ್ಷದ ಕಿಸಾನ್ ಮೋರ್ಚಾ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದೆ. ಈ ಹಿಂದೆಯೂ ಕರೆದಿದ್ದ ಭಾರತ್ ಬಂದ್ ಹಾಗೂ ಇತರೆ ಹೋರಾಟಗಳಲ್ಲಿಯೂ ಕಾಂಗ್ರೆಸ್ ಪಕ್ಷ ಪಾಲ್ಗೊಂಡು ತನ್ನ ಹೋರಾಟದ ಸಾಮರ್ಥ್ಯ ಪ್ರದರ್ಶಿಸಿದೆ ಎಂದರು.