ಬೆಂಗಳೂರು:ಕೋವಿಡ್-19 ಚಿಕಿತ್ಸೆಗೆ ನಗರದ ಎಷ್ಟು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಮತ್ತು ಲಭ್ಯವಿರುವ ಒಟ್ಟು ಬೆಡ್ಗಳ ಸಂಖ್ಯೆ ಎಷ್ಟು ಎಂಬ ವಿವರಗಳನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚಿಸಿದೆ.
ನಗರದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲು ಹಾಸಿಗೆಗಳ ಕೊರತೆಯಿದೆ ಎಂದು ವಕೀಲೆ ಗೀತಾ ಮಿಶ್ರಾ ಹಾಗೂ ಭಾರತ್ ಪುನರುತ್ಥಾನ ಟ್ರಸ್ಟ್ ಸೇರಿದಂತೆ ಹಲವರು ದಾಖಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ ನಗರದಲ್ಲಿ ಕೊರೊನಾ ಸೋಂಕು ಮಿತಿಮೀರಿ ವ್ಯಾಪಿಸುತ್ತಿದೆ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ನಗರದ ವ್ಯಕ್ತಿಯೊಬ್ಬರು 18 ಆಸ್ಪತ್ರೆಗಳಿಗೆ ಅಲೆದಾಡಿ ಎಲ್ಲಿಯೂ ದಾಖಲಿಸಿಕೊಳ್ಳದೆ ಕೊನೆಗೆ ವಿಕ್ಟೋರಿಯಾ ಆಸ್ಪತ್ರೆ ಎದುರು ಬಂದು ಮೃತಪಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದೆ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಎಂಬುದು ಅತ್ಯಂತ ಘೋರ ವಿಚಾರ. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಬಿಬಿಎಂಪಿ ಮುಂದಾಗಬೇಕು ಎಂದು ಸೂಚಿಸಿತು. ಹಾಗೆಯೇ, ನಗರದಲ್ಲಿ ಕೊರೊನಾ ಚಿಕಿತ್ಸೆಗೆ ಎಷ್ಟು ಆಸ್ಪತ್ರೆಗಳನ್ನು ಸಿದ್ಧಗೊಳಿಸಲಾಗಿದೆ. ಈ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಸಂಖ್ಯೆ ಎಷ್ಟು. ಆ್ಯಂಬುಲೆನ್ಸ್ ವ್ಯವಸ್ಥೆ ಹೇಗಿದೆ ಎಂಬ ವಿವರಗಳನ್ನು ಮುಂದಿನ ವಿಚಾರಣೆಯಲ್ಲಿ ಲಿಖಿತವಾಗಿ ತಿಳಿಸುವಂತೆ ಸೂಚಿಸಿತು.
ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಶುಲ್ಕ ವಿಧಿಸುತ್ತಿರುವ ಆರೋಪದ ಕುರಿತು ಪ್ರತಿಕ್ರಿಸಿದ ಪೀಠ, ಖಾಸಗಿ ಆಸ್ಪತ್ರೆಗಳ ಶುಲ್ಕದ ಮೇಲೆ ಸರ್ಕಾರ ನಿಯಂತ್ರಣ ಹೊಂದಿದೆಯೇ? ಈ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇರುವ ನಿಬಂಧನೆಗಳೇನು? ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಇರುವ ಮಾರ್ಗಸೂಚಿಗಳೇನು? ಮೃತದೇಹ ಮುಟ್ಟುವುದರಿಂದ ಸೋಂಕು ಹರಡುತ್ತದೆ ಎಂಬುದು ವೈಜ್ಞಾನಿಕವಾಗಿ ಸತ್ಯವೇ? ಎಂಬ ಬಗ್ಗೆ ಸರ್ಕಾರ ಮುಂದಿನ ಗುರುವಾರದೊಳಗೆ ಮಾಹಿತಿ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.