ಕರ್ನಾಟಕ

karnataka

ETV Bharat / state

ಪ್ರಚೋದನಾಕಾರಿ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಡಿಜಿಪಿಗೆ ದೂರು - ಪೊಲೀಸ್ ಮಹಾನಿರ್ದೇಶಕರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಮನವಿ ಮಾಡಿದ್ದಾರೆ.

kpcc-general-secretary-s-manohar-requested-the-dgp-to-take-action-against-bjp-mla-basana-gowda-patil-yatnal
ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಯತ್ನಾಳ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಕೈ ನಾಯಕ ಮನೋಹರ್ ಐಜಿಡಿಜಿಪಿಗೆ ದೂರು

By ETV Bharat Karnataka Team

Published : Oct 5, 2023, 7:59 PM IST

ಬೆಂಗಳೂರು :ಶಾಸಕಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ದೂರು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಹಾಗೂ ಆಧಾರರಹಿತ ಆರೋಪ ಹಾಗೂ ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದ ಘಟನೆ ಬಗ್ಗೆ ಪ್ರಚೋದನಕಾರಿ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

ಕಾನೂನಾತ್ಮಕ ರೀತಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಭಾಷಣ ಮಾಡಿರುವ ಮಾಹಿತಿಯನ್ನು ನಾವು ನೀಡುತ್ತಿದ್ದೇವೆ. ಈ ಆಧಾರದ ಮೇಲೆ ತಾವು ಮಾಹಿತಿಯನ್ನು ಪಡೆದು ತುರ್ತಾಗಿ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಧರ್ಮಗಳ ನಡುವೆ ಕೋಮುದ್ವೇಷ ಹರಡುವ ಪ್ರಚೋದನಕಾರಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಅತ್ಯಂತ ಕೀಳು ಪದವನ್ನು ಬಳಕೆ ಮಾಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ಪಕ್ಷಕ್ಕೆ ಅಪಮಾನ ಮಾಡಿರುತ್ತಾರೆ. ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದ ಘಟನೆ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಶಾಂತಿ ಕದಡುವ ಉದ್ದೇಶದಿಂದಲೇ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪ್ರತಿ ವಿಷಯದಲ್ಲೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾಯಕರುಗಳ ವಿರುದ್ಧ ಟೀಕಿಸುವಾಗ ಪಾಕಿಸ್ತಾನ, ತಾಲಿಬಾನ್, ಟಿಪ್ಪುಸುಲ್ತಾನ್ ಹಾಗೂ ಮುಸ್ಲಿಂ ಸಮುದಾಯದ ಹೆಸರನ್ನು ಪ್ರಸ್ತಾಪಿಸಿ ಪ್ರಚೋದನೆ ಮಾಡುತ್ತಿದ್ದಾರೆ. ಇದು ಶಾಂತಿ ಕದಡುವ ಅತ್ಯಂತ ಗಂಭೀರ ಹೇಳಿಕೆಗಳಾಗಿರುತ್ತದೆ ಎಂದು ದೂರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಅವಹೇಳನಕಾರಿ ಛಾಯಾಚಿತ್ರಗಳನ್ನು ಚಿತ್ರಿಸಿ ಹಾಗೂ ವಿಡಿಯೋಗಳನ್ನು ಹಾಕಿ ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದರ ವಿರುದ್ಧವೂ ಕ್ರಮವನ್ನು ಕೈಗೊಳ್ಳಬೇಕು. ಈ ಮೇಲಿನ ಎಲ್ಲಾ ವಿಷಯದ ಬಗ್ಗೆ ಮಾಹಿತಿ ಮತ್ತು ದಾಖಲೆಗಳನ್ನು ಈ ಮನವಿ ಪತ್ರದ ಮೂಲಕ ಸಲ್ಲಿಸುತ್ತಿದ್ದೇವೆ. ಇದರ ಆಧಾರದ ಮೇಲೆ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದ ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೂ ಹಾಗೂ ಶಾಂತಿ ಕದಡುವವರ ವಿರುದ್ಧ ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿ ಪ್ರಕರಣವನ್ನು ದಾಖಲಿಸಬೇಕೆಂದು ಈ ಮನವಿ ಪತ್ರದ ಮೂಲಕ ವಿನಂತಿಸಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ :ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಹೊಸ ಪ್ಲಾನ್.. ಟನಲ್ ರಸ್ತೆಗಾಗಿ ಸಾರ್ವಜನಿಕ ಟೆಂಡರ್ ಕರೆಯಲು ಸಿದ್ಧತೆ: ಡಿಸಿಎಂ ಡಿ ಕೆ ಶಿವಕುಮಾರ್

ABOUT THE AUTHOR

...view details