ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕೆಲವು ಅಮಾಯಕ ಯುವಕರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಗಮನ ಹರಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮನವಿ ಮಾಡಿದ್ದಾರೆ.
ಈ ಸಂಬಂಧ ಪತ್ರ ಬರೆದಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ, ಬಿಜೆಪಿ ಕಾರ್ಯಕರ್ತ ನವೀನ್ ಎಂಬಾತ ಪ್ರವಾದಿ ಮಹಮದ್ ಅವರ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಪ್ರಕಟಿಸಿದ್ದಕ್ಕೆ ಗಲಭೆ ನಡೆದಿದೆ. ಈ ಪೋಸ್ಟ್ಗೆ ಸಂಬಂಧಿಸಿದಂತೆ ನಡೆದ ಗಲಭೆ, ದೊಂಬಿ, ಆಸ್ತಿ ನಷ್ಟವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತೆ ಎಂದು ಹೇಳಿದ್ದಾರೆ.
ಈ ಪೋಸ್ಟ್ನಿಂದ ನೊಂದವರು ಕೊಟ್ಟ ದೂರನ್ನು ದಾಖಲಿಸಿಕೊಂಡು ಸಂಬಂಧಿಸಿದವರನ್ನು ಬಂಧಿಸುವಲ್ಲಿ ಪೊಲೀಸ್ ಠಾಣಾಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದಾಗಿ ಆ. 11ರಂದು ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ಅಹಿತಕರ ಘಟನೆ ನಡೆದು ಹೋಗಿದೆ. ಈ ಗಲಭೆ ಪ್ರಕರಣದಲ್ಲಿ ರಾಜಕೀಯ ದುರುದ್ದೇಶದಿಂದ ಕೆಲವು ಅಮಾಯಕ ಯುವಕರನ್ನು ಪೊಲೀಸರು ಬಂಧಿಸಿ ಹಿಂಸಿಸುತ್ತಿರುವುದು ಖಂಡನೀಯ ಎಂದರು.