ಬೆಂಗಳೂರು:ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಈ ಸಾಲಿನ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಕೇಂದ್ರದ ನಿರ್ಧಾರ ಸ್ವಾಗತಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ನಿರ್ಧರಿಸಿದಂತೆಯೇ ರಾಜ್ಯ ಸರ್ಕಾರವೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ವಿನಾಯಿತಿ ನೀಡಲೇಬೇಕಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಸಚಿವ ಸುರೇಶ್ ಕುಮಾರ್ಗೆ ಮನವಿ ಮಾಡಿದ್ದಾರೆ.
ಪ್ರಧಾನಿ ಹೇಳಿಕೆಯ ವಿವರ:
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರು ಅನುಭವಿಸುತ್ತಿರುವ ತಲ್ಲಣಕ್ಕೆ ಕೊನೆ ಹಾಡಬೇಕೆಂಬ ಉದ್ದೇಶವೂ ಇದರಲ್ಲಿದೆ. ಸಮಯ ಮಿತಿಯ ಚೌಕಟ್ಟಿನಲ್ಲಿ ಈಗಾಗಲೇ ಸಮರ್ಪಕವಾಗಿ ವ್ಯಾಖ್ಯಾನಿಸಿರುವ ರೀತಿಯ ಮಾನದಂಡವನ್ನು ಅನುಸರಿಸಿ 12ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲು ಸಿಬಿಎಸ್‌ಇ ಕ್ರಮ ತೆಗೆದುಕೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಅನೇಕ ರಾಜ್ಯಗಳಲ್ಲಿ ಕೋವಿಡ್-19 ಕೇಸ್‌ಗಳ ಸಂಖ್ಯೆ ಹೆಚ್ಚಾಗಿದ್ದು, ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡಲೇ ಬೇಕಾಗುತ್ತದೆ. ಈ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ. ಇಂತಹ ಒತ್ತಡ ಸನ್ನಿವೇಶದಲ್ಲಿ ಮಕ್ಕಳು ಪರೀಕ್ಷೆಗೆ ಹಾಜರಾಗಬಾರದು. ಒಂದೊಮ್ಮೆ ಹಾಜರಾಗಬೇಕಾದ ಪ್ರಸಂಗ ಬಂದರೆ ವಿದ್ಯಾರ್ಥಿಗಳಷ್ಟೇ ಅಲ್ಲ, ಅವರ ಪಾಲಕರು, ಶಿಕ್ಷಕರು ಎಲ್ಲರೂ ತಲ್ಲಣಕ್ಕೆ ಒಳಗಾಗುತ್ತಾರೆ. ಇಂತಹ ತಲ್ಲಣ ಈ ಸಮಯದಲ್ಲಿ ಬೇಕಾಗಿಲ್ಲ ಎಂದು ಪ್ರಧಾನಿ ವಿವರಿಸಿದ್ದರು.
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆಯೇ?:
ಕೇಂದ್ರ ಸರ್ಕಾರ ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿರುವುದರಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳು ನಡೆಯುತ್ತಾ? ರದ್ದಾಗುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ. ಈ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಇಲಾಖೆ ಈ ಮುನ್ನ ತಿಳಿಸಿತ್ತು. ಕೇಂದ್ರ ಸರ್ಕಾರದ ನಿರ್ಧಾರ ನೋಡಿ ಶೀಘ್ರದಲ್ಲೇ ಚರ್ಚೆ ಮಾಡಿ ರಾಜ್ಯದ ನಿರ್ಧಾರ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನಿನ್ನೆ ತಿಳಿಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿಯೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳು ರದ್ದಾಗುವ ಸಾಧ್ಯತೆ ಹೆಚ್ಚಿದೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯನ್ನು ಮುಂದೂಡಿದ್ದ ರಾಜ್ಯ ಸರ್ಕಾರ, ಕಳೆದ ಬಾರಿ ಪಿಯು ಪರೀಕ್ಷೆಯ ಬಗ್ಗೆ ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರ ಕೇಳಿದಾಗ, 'ಪರೀಕ್ಷೆ ನಡೆಸಲು ನಾವು ಸಿದ್ಧರಿದ್ದೇವೆ' ಎಂದು ತಿಳಿಸಲಾಗಿತ್ತು.