ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 2015ನೇ ಸಾಲಿನಲ್ಲಿ ನಡೆಸಿರುವ 428 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಲಾಗಿದೆ.
ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಉತ್ತರ ಪತ್ರಿಕೆಗಳನ್ನು ಸಂರಕ್ಷಿಸಿಡುವಂತೆ ಕೆಪಿಎಸ್ಸಿಗೆ ಸೂಚಿಸಿದ್ದು, ನೇಮಕಾತಿ ಆದೇಶವು ಈ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿದೆ.
ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಅಭ್ಯರ್ಥಿಗಳಾದ ಬಿ.ಕೆ. ಸುಧನ್ವ ಬಂಡೋಲ್ಕರ್ ಸೇರಿದಂತೆ 14 ಮಂದಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಸರ್ಕಾರಕ್ಕೆ ನಿರ್ದೇಶನ ನೀಡಿದ ಪೀಠ, ಅಭ್ಯರ್ಥಿಗಳು ಬರೆದಿರುವ ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳು, ಸಿಸಿಟಿವಿಯಲ್ಲಿ ಸಂಗ್ರಹವಾಗಿರುವ ದೃಶ್ಯಗಳು, ಡಿಜಿಟಲ್ ಮೌಲ್ಯಮಾಪನಕ್ಕೆ ಬಳಸಿರುವ ಸಾಫ್ಟ್ವೇರ್ಗಳು, ಡಿಜಿಟಲ್ ಮೌಲ್ಯಮಾಪನ ಡೇಟಾ ಸೇರಿದಂತೆ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಸಂರಕ್ಷಿಸಿಡುವಂತೆ ಸೂಚಿಸಿತು.