ಬೆಂಗಳೂರು: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಹಾಗೂ ಆಸ್ತಿಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಸಚಿವರು, ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ ಶೇ.56ರಷ್ಟು ಕೊರತೆಯಾಗಿತ್ತು. ಆದರೆ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಹೀಗಾಗಿ ಮಳೆ ಕೊರತೆಯ ಪ್ರಮಾಣ ಶೇ.56 ರಿಂದ ಶೇ.14ಕ್ಕೆ ಇಳಿದಿದೆ. ರಾಜ್ಯದಲ್ಲಿ ಒಟ್ಟಾರೆ ಶೇ.80 ರಷ್ಟು ಮಳೆಯಾಗಿದೆ. ಕಳೆದ ಒಂದು ವಾರದಿಂದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಾದ ಬೀದರ್ ಹಾಗೂ ಕಲಬುರಗಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿ ನಷ್ಟವಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಉತ್ತರ ಒಳನಾಡು ಭಾಗಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ವಾಡಿಕೆಗಿಂತ ಶೇ.170 ರಷ್ಟು ಅಧಿಕ ಮಳೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ. 300, ಯಾದಗಿರಿ ಶೇ.160, ಬೀದರ್ ಶೇ.155, ಬೆಳಗಾವಿಯಲ್ಲಿ ಶೇ.186, ಬಾಗಲಕೋಟೆ ಶೇ.174, ವಿಜಯಪುರ ಶೇ.185 ಹಾಗೂ ಗದಗ ಜಿಲ್ಲೆಯಲ್ಲಿ ಶೇ.166 ರಷ್ಟು ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದರು.
ಕೆಲವೆಡೆ ಮಳೆ ಕೊರತೆ:ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದರೂ, ಬೆಂಗಳೂರು ನಗರ, ಬೆಂ-ಗ್ರಾಮೀಣ, ರಾಮನಗರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದರೂ, ಅಲ್ಲಿನ ವಾಡಿಕೆ ಮಳೆಗಿಂತ ಈಗಿನ ಒಟ್ಟಾರೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ, ಜುಲೈ 28ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ವರದಿ ಇದ್ದು, ಮಳೆ ಕೊರತೆ ನೀಗುವ ವಿಶ್ವಾಸವಿದೆ ಎಂದು ತಿಳಿಸಿದರು.