ಬೆಂಗಳೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಶನಿವಾರ ವಿಧಾನಸೌಧದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಇಲಾಖೆಯಲ್ಲಿಯ ಅಧಿಕಾರಿ ಮತ್ತು ನೌಕರ ವರ್ಗದ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ ನೌಕರರ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚನೆ: ಕೆ.ಎಸ್. ಈಶ್ವರಪ್ಪ - ಅಧಿಕಾರಿ ಮತ್ತು ನೌಕರ ವರ್ಗದ ಸಮಸ್ಯೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಿನ್ನೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಇಲಾಖೆಯಲ್ಲಿಯ ಅಧಿಕಾರಿ ಮತ್ತು ನೌಕರ ವರ್ಗದ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಅವುಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಅನುಕೂಲಕ್ಕಾಗಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಒಂದು ಸಮಿತಿ ಮಾಡಲಾಗಿದೆ. ಈ ಸಮಿತಿಯಲ್ಲಿ ಶ್ರೀಮತಿ ಅಪರ್ಣಾ ಪಾವಟೆ, ಸಿದ್ದೇಶ ಪೋತಲಕಟ್ಟಿ, ಅಶ್ರಫುಲ್ಲ ಹಸನ್ , ರೇವಣಪ್ಪ, ಸಿದ್ದರಾಮಯ್ಯ, ರಾಮಕೃಷ್ಣ, ಪದ್ಮನಾಭ ಸೇರಿದಂತೆ ಹಲವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಇಲಾಖೆಯಲ್ಲಿಯ ಅಧಿಕಾರಿ ಮತ್ತು ನೌಕರ ವರ್ಗದ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲು ಸಚಿವರು ಸೂಚಿಸಿದ್ದಾರೆ.
ಅಧಿಕಾರಿಗಳಿಗೆ ಸಚಿವರ ತಾಕೀತು:ಅಧಿಕಾರಿಗಳು ಮತ್ತು ನೌಕರರಿಗೆ ಸಚಿವರು ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ಸಚಿವರು ತಾಕೀತು ಮಾಡಿದರು. ಪಂಚಾಯತ್ ರಾಜ್ ಇಲಾಖೆಯಲ್ಲಿಯ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಸಾರ್ವಜನಿಕ ಕುಂದು ಕೊರತೆಗಳಿಗೆ ಸ್ಪಂದಿಸುತ್ತಿಲ್ಲ ಎಂಬಂತಹ ಗಂಭೀರ ಆರೋಪಗಳಿವೆ. ಇನ್ನು ಮುಂದೆ ಏನೇ ದೂರುಗಳು ಬಂದರೂ ಕೂಡ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.