ಬೆಂಗಳೂರು: ಜನವರಿ 13 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್ ಪರೀಕ್ಷೆ) ನಡೆಯಲಿದ್ದು, ಮಾಂಗಲ್ಯ ಸರ ಹಾಗು ಕಾಲುಂಗುರಕ್ಕೆ ಅನುಮತಿಸಿ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಪ್ರಾಧಿಕಾರದ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಸುತ್ತೋಲೆ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕೆ-ಸೆಟ್ (KSET) ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲು ರಾಜ್ಯ ಸರ್ಕಾರದಿಂದ ಆದೇಶಿಸಲಾಗಿರುವುದರಿಂದ ಜನವರಿ 13ರ ಶನಿವಾರದಂದು ಪರೀಕ್ಷೆ ನಡೆಸಲಾಗುತ್ತಿದೆ. ಅಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಮೊದಲ ಪ್ರಶ್ನೆ ಪತ್ರಿಕೆ ಪರೀಕ್ಷೆ ಇರಲಿದ್ದು, ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಎರಡನೇ ಪ್ರಶ್ನೆಪತ್ರಿಕೆಯ ಪರೀಕ್ಷೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.inಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಪ್ರವೇಶ ಪತ್ರವನ್ನು ಮತ್ತು ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅಲ್ಲದೆ, ಮಾರ್ಗದರ್ಶನಗಳನ್ನು / ಕಾರ್ಯವಿಧಾನಗಳನ್ನು ತಪ್ಪದೆ ಅನುಸರಿಸಲು ಮತ್ತು ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ.
ಸೂಚನೆಗಳು
- ನಿಗದಿತ ಸಮಯಕ್ಕಿಂತ ಒಂದು ಗಂಟೆಯ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಲು ಅಭ್ಯರ್ಥಿಗಳು ಮುನ್ನೆಚ್ಚರಿಕೆಯಿಂದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು.
- ನಿಗದಿಪಡಿಸಿರುವ ಪರೀಕ್ಷಾ ಕೇಂದ್ರವನ್ನು ಹೊರತುಪಡಿಸಿ ಬೇರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯಲು ಅಭ್ಯರ್ಥಿಗಳಿಗೆ ಅನುವು ಮಾಡಿಕೊಡುವುದಿಲ್ಲ.
- ಅಭ್ಯರ್ಥಿಯು ಕಡ್ಡಾಯವಾಗಿ ಪ್ರವೇಶ ಪತ್ರ ಮತ್ತು ಮಾನ್ಯತೆ ಇರುವ ಯಾವುದಾದರು ಒಂದು ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕು.
- ಎರಡನೇ ಅವಧಿಯ ಪರೀಕ್ಷೆಯು ಮ.12 ರಿಂದ ಪ್ರಾರಂಭವಾಗುವುದರಿಂದ, ಅಭ್ಯರ್ಥಿಗಳನ್ನು ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸಲಾಗುವುದಿಲ್ಲ.
- ಅಭ್ಯರ್ಥಿಯು ಓಎಂಆರ್ ಉತ್ತರ ಪತ್ರಿಕೆಯಲ್ಲಿ ನೋಂದಣಿ ಸಂಖ್ಯೆಯನ್ನು ಬರೆದು ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು. ನಂತರ ಅಭ್ಯರ್ಥಿಯು ಪ್ರಶ್ನೆಪತ್ರಿಕೆಯ ವರ್ಷನ್ ಕೋಡ್ ಅನ್ನು ತಪ್ಪಿಲ್ಲದೆ ಬರೆದು ಸಂಬಂಧಿಸಿದ ವೃತ್ತಗಳನ್ನು ಶೇಡ್ ಮಾಡಬೇಕು.
- ಲಿಪಿಕಾರರ ಸೇವೆಯನ್ನು ಪಡೆಯುಲು, ಪ್ರಾಧಿಕಾರದ ಲಿಂಕ್‌ನಲ್ಲಿ ಲಿಪಿಕಾರರ ಮಾಹಿತಿಗಳನ್ನು ನೀಡಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಲಿಪಿಕಾರರ ಮಾಹಿತಿಯನ್ನೂ ಸಹ ಪ್ರವೇಶ ಪತ್ರದಲ್ಲಿ ಮುದ್ರಿಸಲಾಗಿದೆ.
ಅಭ್ಯರ್ಥಿಗಳ ಗಮನಕ್ಕೆ:ನೋಂದಣಿ ಸಂಖ್ಯೆ, ಕೇಂದ್ರ ಸಂಖ್ಯೆ ಮತ್ತು ವಿಷಯ ಸಂಕೇತವನ್ನು ತಪ್ಪಾಗಿ ಬರೆಯುವ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ಮೌಲ್ಯ ಮಾಪನ ಮಾಡುವುದಿಲ್ಲ. ಅಭ್ಯರ್ಥಿಗಳು ಓಎಂಆರ್ನಲ್ಲಿನ ನಿಗದಿತ ಜಾಗದಲ್ಲಿ ಕಡ್ಡಾಯವಾಗಿ ಸಹಿ ಮಾಡಬೇಕು.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.
ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.