ಕರ್ನಾಟಕ

karnataka

ETV Bharat / state

ಸಿಬ್ಬಂದಿ ಆರ್ಥಿಕ ಭದ್ರತೆಗೆ ಕೆಎಸ್ಆರ್​ಟಿಸಿ ಆದ್ಯತೆ: ನೌಕರರ ನಿಧನದ ವೇಳೆ ನೀಡುವ ಪರಿಹಾರ ಮೊತ್ತ 3 ಲಕ್ಷದಿಂದ 10 ಲಕ್ಷ ರೂಪಾಯಿಗೆ ಹೆಚ್ಚಳ - ksrtc increases the death compensation

ಕೆಎಸ್​ಆರ್​ಟಿಸಿ ತನ್ನ ಸಿಬ್ಭಂದಿ ಅಪಘಾತವಲ್ಲದೇ ಇತರ ಕಾರಣಗಳಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಏರಿಸಿದೆ.

ಕೆಎಸ್ಆರ್ಟಿಸಿ
ಕೆಎಸ್ಆರ್ಟಿಸಿ

By ETV Bharat Karnataka Team

Published : Oct 30, 2023, 7:20 PM IST

ಬೆಂಗಳೂರು:ದೇಶದ ಸಾರಿಗೆ ನಿಗಮಗಳ ಇತಿಹಾಸದಲ್ಲೇ ಸಿಬ್ಬಂದಿಗೆ ಕೋಟಿ ರೂ.ಗಳ ಅಪಘಾತ ವಿಮೆ ಪರಿಚಯಿಸಿದ್ದ ಕೆಎಸ್​ಆರ್​ಟಿಸಿ ಇದೀಗ ಅಪಘಾತ ಹೊರತುಪಡಿಸಿ ಇತರ ಕಾರಣದಿಂದ ಸಂಭವಿಸುವ ಸಾವಿನ ಪ್ರಕರಣಗಳಿಗೆ ನೀಡುವ ಪರಿಹಾರದ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಆದೇಶಿಸಿದೆ. ಈ ಮೂಲಕ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಸಾರಿಗೆ ಸಿಬ್ಬಂದಿಗೆ ಹೆಚ್ಚಿನ ಆರ್ಥಿಕ ಭದ್ರತೆ ಕಲ್ಪಿಸುವ ಘೋಷಣೆ ಮಾಡಿದೆ.

ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ, ಕೆಎಸ್​ಆರ್​ಟಿಸಿಯ ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷಗಳಿಂದ ರೂ.10 ಲಕ್ಷಕ್ಕೆ ಏರಿಕೆ ಮಾಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ.

ಕೆಎಸ್​ಆರ್​ಟಿಸಿಯಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ರೂ. 1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸುತ್ತಿದೆ. ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ರೂ.1 ಕೋಟಿ ನೀಡಲಾಗಿದೆ.

ಇದೀಗ ಈ ಯೋಜನೆಯ ವಿಸ್ತರಣೆಯಂತೆ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ ಸುಮಾರು 100 ನೌಕರರು ಮರಣ ಹೊಂದುತ್ತಿದ್ದಾರೆ. ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ರೂ.3 ಲಕ್ಷ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದಲೂ ಸಹ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ ರೂ. 7 ಲಕ್ಷಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ ಎಂದು ಸಾರಿಗೆ ನಿಗಮ ತಿಳಿಸಿದೆ.

ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ ನೌಕರರು ಮರಣ ಹೊಂದಿದ್ದಲ್ಲಿ, ಅವರ ಅವಲಂಬಿತರಿಗೆ ಆದಷ್ಟು ಆರ್ಥಿಕವಾಗಿ ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ. ಸದರಿ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ ರೂ. 100 ಗಳಿಂದ ರೂ. 200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು ರೂ. 100ಗಳಿಗೆ ಹೆಚ್ಚಿಸಿ, ಪರಿಷ್ಕರಿಸಲಾಗಿದೆ. ಪರಿಷ್ಕೃತ ಆದೇಶವು ದಿನಾಂಕ 01.11.2023 ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ:ಮೈಸೂರು ರಾಜ್ಯ 'ಕರ್ನಾಟಕ'ವಾಗಿ 50 ಸಂವತ್ಸರ: ವರ್ಷಪೂರ್ತಿ ಸರ್ಕಾರದಿಂದ ವಿವಿಧ ಕಾರ್ಯಕ್ರಮ

ABOUT THE AUTHOR

...view details