ಕರ್ನಾಟಕ

karnataka

ETV Bharat / state

ದೀಪಾವಳಿಗೆ ಕೆಎಸ್​ಆರ್​ಟಿಸಿಯಿಂದ 2,000 ವಿಶೇಷ ಬಸ್: ಪ್ರಯಾಣಿಕರಿಗೆ ಶೇ.10ರಷ್ಟು ರಿಯಾಯಿತಿ

KSRTC Special buses for deepavali: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಕಲ್ಪಿಸಿದೆ.

KSRTC Special bus for diwali
ಕೆಎಸ್​ಆರ್​ಟಿಸಿ ವಿಶೇಷ ಬಸ್

By ETV Bharat Karnataka Team

Published : Nov 5, 2023, 10:42 AM IST

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿಯಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 12ರಂದು ನರಕ ಚತುರ್ದಶಿ, ನವೆಂಬರ್ 14ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನ.10 ರಿಂದ 12 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2,000 ಹೆಚ್ಚುವರಿ ವಿಶೇಷ ಬಸ್‌ ಸಂಚಾರದ ವ್ಯವಸ್ಥೆಯಾಗಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಪ್ರಯಾಣಿಕರು ವಾಪಸ್ ಬರಲು ಅನುಕೂಲವಾಗುವಂತೆ ನವೆಂಬರ್ 14 ಹಾಗೂ 15 ರಂದು ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್​ಟಿಸಿ ಮಾಹಿತಿ ನೀಡಿದೆ.

ವಿಶೇಷ ಸಾರಿಗೆ ಸೇವೆಯು ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಲಭ್ಯವಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಾಗುತ್ತದೆ‌.

ತಮಿಳುನಾಡು ಮತ್ತು ಕೇರಳ ಭಾಗದ ಮಧುರೈ, ಕುಂಬಕೋಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರೀಮಿಯಂ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್​ಟಿಸಿ ಮಾಹಿತಿ ನೀಡಿದೆ.

ಶೇ.5-10 ರಷ್ಟು ರಿಯಾಯಿತಿ:ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕಪ್ ಪಾಯಿಂಟ್‌ ಹೆಸರು ಗಮನಿಸುವಂತೆ ಸೂಚಿಸಲಾಗಿದೆ. ಇ-ಟಿಕೇಟ್ ಬುಕಿಂಗ್‌ ಅನ್ನು Www.ksrtc.karnataka.gov.in ವೆಬ್​ಸೈಟ್ ಮುಖಾಂತರ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಈ ಮೂಲಕ ಸಹ ಟಿಕೆಟ್ ಕಾಯ್ದಿರಿಸಬಹುದು. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್​ಟಿಸಿ ಮಾಹಿತಿ ಒದಗಿಸಿದೆ.

ಇದನ್ನೂ ಓದಿ:ದೀಪಾವಳಿ ಹಬ್ಬಕ್ಕೆ 500ಕ್ಕೂ ಹೆಚ್ಚು ವಿಶೇಷ ಬಸ್​ಗಳ ಸೇವೆ; ಹೆಚ್ಚು ಸೀಟ್​ ಬುಕ್​ ಮಾಡಿದ್ರೆ ಆಫರ್​

ABOUT THE AUTHOR

...view details