ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಮನಗರದಲ್ಲಿನ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.
ನಗರದ ಬಿಜಿಎಸ್ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆ ಆಗಿ ಬಳಸಿಕೊಳ್ಳಿ. ಇದಕ್ಕೆ ಹಣಕಾಸಿನ ಕೊರತೆಯಿದ್ದರೆ ಶಾಸಕರ ನಿಧಿಯ ಹಣವನ್ನು ಬಳಸಿಕೊಳ್ಳುವಂತೆ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಕ್ವಾರಂಟೈನ್ಗೆ ಸ್ಥಳದ ಅಭಾವ ಇರುವುದರಿಂದ ವಂದಾರಗುಪ್ಪೆ ಬಳಿಯ ಪೊಲೀಸ್ ತರಬೇತಿ ಕೇಂದ್ರ ಬಳಸಿಕೊಳ್ಳುವ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ. ಗೃಹ ಸಚಿವರು ಕೂಡ ಈ ವಿಷಯದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.