ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ಜೊತೆಗೆ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದ ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ, ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂತಹ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸೂಕ್ತ ಆಸ್ಪತ್ರೆ ಇಲ್ಲದಿರುವುದೇ ಇಷ್ಟಕ್ಕೆಲ್ಲ ಕಾರಣವಾಯ್ತಾ..? ಆ್ಯಂಬುಲೆನ್ಸ್ ಅಪಘಾತದಲ್ಲಿ ಆ ನಾಲ್ವರು ವಿನಾಕಾರಣ ಪ್ರಾಣಬಿಟ್ಟರಾ?
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರ್ಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಸುಸಜ್ಜಿತ ಆಸ್ಪತ್ರೆಗೆ ಹೋರಾಟದ ಬೆನ್ನಲ್ಲೆ ತಟ್ಟಿದ ಬಿಸಿ; ಜನಪ್ರತಿನಿಧಿಗಳಿಂದ ಭರವಸೆಯ ಮಹಾಪೂರ
ರಾಜ್ಯದಲ್ಲಿ ಇನ್ನೆಷ್ಟು ಆಂಬ್ಯುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ಸರ್ಕಾರ ಕಣ್ತೆರೆಯಲೇಬೇಕು. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರ್ಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು, ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ:ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಂಡ ಉತ್ತರ ಕನ್ನಡ ಜನತೆ