ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚಿಸುವ ತಂತ್ರಗಾರಿಕೆ ಪ್ರಾರಂಭವಾಗಿದ್ದು, ಇದರ ಭಾಗವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತ್ತಾದಲ್ಲಿ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಪ್ರಾದೇಶಿಕ ಪಕ್ಷಗಳಲ್ಲಿ ಒಮ್ಮತ ರೂಪಿಸುವ ಸಲುವಾಗಿ ಸಭೆ: ಕೋಲ್ಕತ್ತಾದ ಭವಾನಿಪುರದಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ದೇಶದ ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತು ಉಭಯ ನಾಯಕರು ಸಮಾಲೋಚನೆ ನಡೆಸುತ್ತಿದ್ದಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯನ್ನು ಎದುರಿಸುವ ತಂತ್ರಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಸಹ ಮಣಿಸುವ ಕುರಿತು ಮಾತುಕತೆಯೂ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳಲ್ಲಿ ಒಮ್ಮತ ರೂಪಿಸುವ ಸಲುವಾಗಿ ಸಭೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮಮತಾರನ್ನು ಪಕ್ಷದ ಪರವಾಗಿ ಪ್ರಚಾರಕ್ಕೆ ಆಹ್ವಾನಿಸುವ ಸಾಧ್ಯತೆ:ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಯ ಕುರಿತು ಮಾಹಿತಿ ನೀಡಲಿದ್ದಾರೆ. ಅಲ್ಲದೇ, ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆಯಲ್ಲಿ ಸಹಕಾರ ನೀಡುವುದಾಗಿಯೂ ಹೇಳಿದ್ದಾರೆ. ಇದೇ ವೇಳೆ ಮಮತಾ ಬ್ಯಾನರ್ಜಿ ಅವರನ್ನು ವಿಧಾನಸಭಾ ಚುನಾವಣೆಗೆ ಪಕ್ಷದ ಪರವಾಗಿ ಪ್ರಚಾರಕ್ಕೆ ಆಹ್ವಾನಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಅವರು ಆಗಮಿಸಿದ್ದರು. ಮೊದಲಿನಿಂದಲೂ ತೃಣಮೂಲ ಕಾಂಗ್ರೆಸ್ ಜೊತೆ ಜೆಡಿಎಸ್ ಸ್ನೇಹಮಯ ಸಂಬಂಧ ಹೊಂದಿದೆ.