ಕರ್ನಾಟಕ

karnataka

ETV Bharat / state

ಹಿಜಾಬ್​ ಪ್ರಕರಣ: ಸಿಜೆ ನೇತೃತ್ವದಲ್ಲಿ ವಿಶೇಷ ಪೀಠ ರಚನೆ, ನಾಳೆ ಮಧ್ಯಾಹ್ನವೇ ವಿಚಾರಣೆ

ಹಿಜಾಬ್​ ಮತ್ತು ಕೇಸರಿ ಪ್ರಕರಣದ ವಿಚಾರಣೆಗೆ ಹೈಕೋರ್ಟ್​​ ವಿಸ್ತೃತ ಪೀಠವು ರಚನೆಯಾಗಿದೆ. ಪ್ರಕರಣದ ತೀವ್ರತೆ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅರ್ಜಿಗಳ ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಿದ್ದಾರೆ.

Karnataka high court larger bench formed to hearing on hijab row
ಹಿಜಾಬ್​ ಪ್ರಕರಣ: ಮೂವರು ನ್ಯಾಯಮೂರ್ತಿಗಳ ಪೀಠದಿಂದ ವಿಚಾರಣೆ

By

Published : Feb 9, 2022, 9:30 PM IST

Updated : Feb 9, 2022, 11:02 PM IST

ಬೆಂಗಳೂರು:ಹಿಜಾಬ್‌ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ವಿಶೇಷ ಪೀಠ ರಚನೆ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚಿಸಲಾಗಿದೆ.

ಹಿಜಾಬ್ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರಮ ಪ್ರಶ್ನಿಸಿ ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಹಲವು ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನಿನ್ನೆ ಹಾಗೂ ಇಂದು ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು.

ಇಂದು ನಡೆದ ವಿಚಾರಣೆ ವೇಳೆ ಪ್ರಕರಣದಲ್ಲಿ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಆರೋಪವಿದೆ. ಅಲ್ಲದೇ, ಹಿಜಾಬ್ ಧರಿಸುವುದು ಮೂಲಭೂತ ಹಕ್ಕಾಗಿದೆಯೇ ಮತ್ತು ಹಿಜಾಬ್ ಧರಿಸುವುದು ಕಡ್ಡಾಯ ಧಾರ್ಮಿಕ ಆಚರಣೆಯೇ ಎಂಬುದೂ ಸೇರಿದಂತೆ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾಗಿದೆ. ಆದ್ದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವ ಅಗತ್ಯವಿದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅಭಿಪ್ರಾಯಪಟ್ಟಿದ್ದರು.

ಪ್ರಕರಣದಲ್ಲಿನ ವಿದ್ಯಾರ್ಥಿನಿಯರ ಪರ ವಕೀಲರು ಹಾಗೂ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಸೇರಿದಂತೆ ಎಲ್ಲ ವಕೀಲರೂ ಸಹಮತ ವ್ಯಕ್ತಪಡಿಸಿದ್ದರಿಂದ ನ್ಯಾಯಮೂರ್ತಿ ದೀಕ್ಷಿತ್ ಅರ್ಜಿಗಳ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವಹಿಸುವಂತೆ ಸಿಜೆ ಅವರಿಗೆ ಮನವಿ ಮಾಡುವುದರ ಜೊತೆಗೆ, ಈ ವಿಚಾರವನ್ನು ಮತ್ತು ಕಡತಗಳನ್ನು ಕೂಡಲೇ ಸಿಜೆ ಕಚೇರಿಗೆ ರವಾನಿಸುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದ್ದರು.

ಪ್ರಕರಣದ ತೀವ್ರತೆ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅರ್ಜಿಗಳ ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಿದ್ದಾರೆ. ನಾಳೆ ಮಧ್ಯಾಹ್ನ 2.30ಕ್ಕೆ ಅರ್ಜಿಗಳ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ:ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ : ಸಿಜೆ ಅಂಗಳಕ್ಕೆ ಹಿಜಾಬ್​​ ಕೇಸ್.. ಇಂದಿನ ವಾದ- ಪ್ರತಿವಾದ ಹೀಗಿತ್ತು!​​​​​​​​​

Last Updated : Feb 9, 2022, 11:02 PM IST

ABOUT THE AUTHOR

...view details