ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಹುಕಾಲ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಸಂಜೆ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂಬೇಡ್ಕರ್ ಮೈದಾನದಿಂದ ಲೀಲಾವತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ನಟಿಯರಾದ ಸುಧಾರಾಣಿ, ಮಾಳವಿಕಾ ಸೇರಿದಂತೆ ಇನ್ನಿತರರು ಅಂತಿಮ ದರ್ಶನ ಪಡೆದುಕೊಂಡರು.
ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ: ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರು, ಗಣ್ಯರು, ಅಭಿಮಾನಿಗಳು ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. 11 ಗಂಟೆಯಿಂದ ಇಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಸರಿ ಸುಮಾರು 2 ಗಂಟೆಯವರೆಗೆ ಲೀಲಾವತಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಪಡೆದುಕೊಳ್ಳಬಹುದಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ನಾಲ್ಕುವರೆ ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚಿದ್ದ ಹಿರಿಯ ನಟಿ ಲೀಲಾವತಿ ಅವರು ಬರೋಬ್ಬರಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಅಮೋಘ ಅಭಿನಯಕ್ಕೆ ಅಪಾರ ಸಂಖ್ಯೆಯ ಸಿನಿಪ್ರೇಮಿಗಳು ಮನಸೋತಿದ್ದರು. ಆದರೆ ಕೆಲ ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಲೀಲಾವತಿ ಅವ ನಿವಾಸಕ್ಕೆ ಆಗಮಿಸಿ, ಆರೋಗ್ಯ ವಿಚಾರಿಸಿದ್ದರು. ಆದ್ರೆ ಶುಕ್ರವಾರ ಸಂಜೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.