ಬೆಂಗಳೂರು :ಚುನಾವಣೆಯ ವಿವಿಧ ಜಾಗೃತ ದಳಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘಿಸಿರುವ ಕುರಿತು ಮಾರ್ಚ್ 29 ರಿಂದ ಇಲ್ಲಿಯವರೆಗೆ ಈ ಕೆಳಗಿನ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ ಒಟ್ಟು 17,36,04,076 ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿ ಒಟ್ಟು ಸೇರಿ 22,35,85,130 ರೂ. ಮೌಲ್ಯದ 3,27,604 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ. 42,66,910- ಮೌಲ್ಯದ 82.85 ಕೆ.ಜಿ ಮಾದಕ ದ್ರವ್ಯಗಳನ್ನು ಸೀಜ್ ಮಾಡಲಾಗಿದೆ.
ಅಬಕಾರಿ ಇಲಾಖೆಯು 584 ಗಂಭೀರ ಪ್ರಕರಣಗಳನ್ನು ಹಾಗೂ ಮದ್ಯದ ಪರವಾನಗಿ ಉಲ್ಲಂಘಿಸಿದ 373 ಪ್ರಕರಣಗಳು, 16 ಎನ್ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965ರ ಪರಿಚ್ಛೇದ 15 (ಎ) ಅನ್ವಯ ಒಟ್ಟು 1,560 ಪ್ರಕರಣಗಳನ್ನು ದಾಖಲಿಸಿವೆ. 357 ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿ 8,50,61,733 ರೂ. ಮೌಲ್ಯದ 22.691 ಕೆ.ಜಿ ಚಿನ್ನ, 65,19,560 ರೂ. ಮೌಲ್ಯದ 93.563 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿ 11,69,55,485 ರೂ. ಮೌಲ್ಯದ ಉಚಿತ ಕೊಡುಗೆ ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಗದು, ಮದ್ಯ, ಮಾದಕ ದ್ರವ್ಯ, ಅಮೂಲ್ಯ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 415 ಪ್ರಥಮ ತನಿಖಾ ವರದಿ (FIR) ದಾಖಲಿಸಿದ್ದಾರೆ.
ಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ಒಟ್ಟಾರೆ 37,462 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 10 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 07 ಶಸ್ತ್ರಾಸ್ತ್ರಗಳ ಪರವಾನಗಿ ರದ್ದುಪಡಿಸಲಾಗಿದೆ. ಸಿಆರ್ಪಿಸಿ ಕಾಯ್ದೆಯಡಿ 1,715 ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ 2,486 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 3,960 ಜಾಮೀನು ರಹಿತ ವಾರೆಂಟ್ಗಳನ್ನು ಜಾರಿಗೊಳಿಸಲಾಗಿದೆ. ಎಲ್ಲಾ ತಂಡಗಳು ಒಟ್ಟು ರೂ. 60,99,92,894/- ಮೌಲ್ಯದ ನಗದು ಸೇರಿದಂತೆ ಮದ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಆಯೋಗ ಮಾಹಿತಿ ನೀಡಿದೆ.
ವಿಚಕ್ಷಣ ದಳ ಮತ್ತು ಪೊಲೀಸ್ ಅಧಿಕಾರಿಗಳು ಸೇರಿ ಬೆಂಗಳೂರು ನಗರದ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ರೂ. 1,47,00,000/- ಮೌಲ್ಯದ 8.589 ಕೆ.ಜಿ ಬಂಗಾರ ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬೆಂಗಳೂರು ನಗರದ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಲ್ಲಿ 3,36,95,900 ರೂ. ನಗದನ್ನು ವಶಪಡಿಸಿಕೊಂಡಿದೆ.