ಬೆಂಗಳೂರು: ಲೋಕಸಭಾ ಚುನಾವಣಾ ಸಿದ್ಧತೆಗೆ ರಾಜ್ಯ ಬಿಜೆಪಿ ಅಧಿಕೃತ ಚಾಲನೆ ನೀಡುತ್ತಿದ್ದು, ಸೋಮವಾರ ಲೋಕಸಭಾ ಚುನಾವಣಾ ಯೋಜನಾ ಸಭೆ ಆಯೋಜನೆ ಮಾಡಿದೆ. ಹೈಕಮಾಂಡ್ ಸಂದೇಶ ಹೊತ್ತ ರಾಜ್ಯ ಬಿಜೆಪಿ ಉಸ್ತುವಾರಿ ನಗರಕ್ಕೆ ಆಗಮಿಸಿದ್ದು, ರಾಜ್ಯ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿಯ ಲೋಕಸಭಾ ಚುನಾವಣಾ ಯೋಜನಾ ಸಭೆಯು ಸೋಮವಾರ ಬೆಳಗ್ಗೆ 10 ಗಂಟೆಗೆ ಯಲಹಂಕ ಬಳಿಯ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಹೋಟೆಲ್ ರಮಾಡದಲ್ಲಿ ನಡೆಯಲಿದೆ.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ನಡೆಯಲಿರುವ ಹೊಸ ನಾಯಕತ್ವದ ನೇತೃತ್ವದ ಮೊದಲ ಸಭೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ. ರಾಜ್ಯದಲ್ಲಿ ಪಕ್ಷ 25 ಸಂಸದರನ್ನು ಹೊಂದಿದ್ದು, ಈ ಬಾರಿ ಹಲವರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಅಂತಹ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಹುಡುಕಾಟ ನಡೆಸಬೇಕಿದೆ. ಕೆಲವು ಕಡೆ ಅಭ್ಯರ್ಥಿ ಬದಲಾವಣೆ ಮಾಡುವ ಆಲೋಚನೆಯೂ ಪಕ್ಷಕ್ಕಿದೆ. ಆ ನಿಟ್ಟಿನಲ್ಲಿ ಮಹತ್ವದ ಸಭೆ ನಡೆಯಲಿದೆ. ಇರುವ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗುತ್ತದೆ.