ಬೆಂಗಳೂರು:ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ಅಭಿವೃದ್ಧಿ ನಿಗಮಕ್ಕೆ(ಕೆಎಸ್ಡಿಎಲ್) ಕಚ್ಚಾವಸ್ತುಗಳು ಪೂರೈಕೆಗೆ ಗುತ್ತಿಗೆ ಪಡೆದವರಿಗೆ ಕಾರ್ಯಾದೇಶ ನೀಡಲು ಲಂಚ ಸ್ವೀಕರಿಸಿದ ಪ್ರಕರಣ ಸೇರಿದಂತೆ ಈ ರೀತಿಯ ಲಂಚ ಪಡೆಯುವ ಪ್ರಕರಣಗಳನ್ನು ವಿಶೇಷ ತನಿಖಾ ದಳ(ಎಸ್ಐಟಿ) ರಚನೆ ಮಾಡಿ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದರಿಂದ ಶ್ರೀರಾಮ ಸೇನೆ ಅರ್ಜಿಯನ್ನು ಹಿಂಪಡೆದಿದೆ.
ಶ್ರೀರಾಮಸೇನೆಯ ದಾವಣಗೆರೆಯ ಜಿಲ್ಲಾ ಘಟಕದ ಅಧ್ಯಕ್ಷ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಭ್ರಷ್ಟಾಚಾರ ಪ್ರಕರಣಗಳಲ್ಲಿ ಮಾಡಾಳ್ ವಿರುಪಾಕ್ಷಪ್ಪ ಮನೆ ಮೇಲೆ ದಾಳಿ ನಡೆಸಿದ ಸಂದರ್ಭಗಳಲ್ಲಿ ಕೋಟ್ಯಾಂತರ ರೂ.ಗಳು ಸಿಕ್ಕಿದೆ. ಇದೇ ರೀತಿಯಲ್ಲಿ ಈ ಹಿಂದೆಯೂ ಹಲವು ಭ್ರಷ್ಟ ಅಧಿಕಾರಿಗಳು ಮತ್ತು ರಾಜಕಾರಣಿಗಳು ಮನೆಗಳಲ್ಲಿ ಕೋಟ್ಯಾಂತರ ಬೆಲೆ ಬಾಳುವ ಚಿನ್ನಾಭರಣ ಮತ್ತು ಹಣ ಸಿಕ್ಕಿದೆ. ಈ ಪ್ರಕರಣಗಳು ಕೆಲ ದಿನಗಳ ಕಾಲ ಸುದ್ದಿಯಲ್ಲಿದ್ದು, ಬಳಿಕ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಈ ರೀತಿಯ ಪ್ರಕರಣಗಳನ್ನು ವಿಶೇಷ ತನಿಖಾ ಸಂಸ್ಥೆ ಅಥವಾ ಪ್ರತ್ಯೇಕ ತನಿಖಾ ಸಂಸ್ಥೆಗಳ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು. ಅಲ್ಲದೆ, ಲೋಕಾಯುಕ್ತ ಸಂಸ್ಥೆಯು ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ಮಾಡಾಳ್ ಪ್ರಕರಣದಲ್ಲಿ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಇದರಿಂದ ಪಾರದರ್ಶಕ ತನಿಖೆಗೆ ನಡೆಯುವುದು ಕಷ್ಟಸಾಧ್ಯ. ಹೀಗಾಗಿ ವಿಶೇಷ ತನಿಖಾ ತಂಡ ರಚನೆ ಮಾಡಬೇಕು ಎಂದು ಮನವಿ ಮಾಡಿದ್ದರು.