ಬೆಂಗಳೂರು: ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಂಜೂರಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠವು ಇಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿ ಅಂತಿಮ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಮಾಡಾಳ್ ಅವರಿಗೆ ಮತ್ತೆ ಬಂಧನ ಭೀತಿ ಉಂಟಾಗಿದೆ.
ಮಾಡಾಳ್ ಪ್ರಕರಣದ ಆದೇಶದಲ್ಲಿ ಉಲ್ಲೇಖಿಸಿರುವ ಅಂಶ:ಪ್ರಕರಣದ ಮೊದಲ ಆರೋಪಿಯಾಗಿರುವ ಅರ್ಜಿದಾರರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅತ್ಯಗತ್ಯವಾಗಿದೆ. ಅಲ್ಲದೆ, ಲಂಚ ಪ್ರಕರಣದಲ್ಲಿ ಅರ್ಜಿದಾರರು ಭಾಗಿಯಾಗಿರುವ ಸಂಬಂಧ ಅಗತ್ಯ ಸಾಕ್ಷ್ಯಾಧಾರಗಳಿವೆ. ಪ್ರಕರಣವನ್ನು ವಿಚಾರಣೆಗೆ ಒಳಪಡಿಸಬೇಕಾದ ಅಗತ್ಯವಿದೆ ಎಂದು ಗೊತ್ತಾಗಿದೆ. ಈ ನಿಟ್ಟಿನಲ್ಲಿ ಈ ಹಿಂದೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದು ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ, ನೀರೀಕ್ಷಣಾ ಜಾಮೀನು ಮಂಜೂರಾದ ಬಳಿಕ ಆರೋಪಿತರು ವಿಚಾರಣೆಗೆ ಸೂಕ್ತ ರೀತಿಯಲ್ಲಿ ಸಹಕಾರ ನೀಡದಿದ್ದಲ್ಲಿ ನಿರೀಕ್ಷಣಾ ಜಾಮೀನು ರದ್ದು ಪಡಿಸಬಹುದಾಗಿದೆ ಎಂಬುದಾಗಿ ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ರದ್ದು ಪಡಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಲಾಗಿದೆ.
ಅರ್ಜಿದಾರರ ವಿರುದ್ಧದ ಆರೋಪವು ನೇರವಾಗಿ ರಾಜ್ಯ ಸರ್ಕಾರದ ವಿರುದ್ಧದ ಆರ್ಥಿಕ ಅಪರಾಧವಲ್ಲದಿದ್ದರೂ, ಕೆಎಸ್‌ಡಿಎಲ್ ರಾಜ್ಯ ಸರ್ಕಾರಕ್ಕೆ ಸೇರಿದ ಸಾರ್ವಜನಿಕ ಸಂಸ್ಥೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್‌ಗಳ ಉತ್ಪಾದನೆಗೆ ರಾಸಾಯನಿಕಗಳು ಅಥವಾ ಕಚ್ಚಾ ವಸ್ತುಗಳನ್ನು ಖರೀದಿಸಲು ಟೆಂಡರ್ ಪ್ರಕ್ರಿಯೆ ನಡೆಸಿದೆ. ಈ ಪ್ರಕ್ರಿಯೆಯಲ್ಲಿ ಲಂಚ ಪಡೆದಲ್ಲಿ ಗುಣಮಟ್ಟದ ಕಚ್ಚಾ ಸಾಮಗ್ರಿಗಳನ್ನು ಪೂರೈಸುತ್ತದೆ ಮತ್ತು ಕಡಿಮೆ ಮೊತ್ತವನ್ನು ಸ್ವೀಕರಿಸುತ್ತದೆ ಎಂದು ಯಾರೂ ನಿರೀಕ್ಷಿಸಲಾಗುವುದಿಲ್ಲ. ಈ ಬೆಳವಣಿಗೆ ಕಚ್ಚಾ ವಸ್ತುಗಳ ಬೆಲೆ ಮತ್ತು ಉತ್ತಮ ಗುಣಮಟ್ಟದ ನಿರೀಕ್ಷೆ ಹುಸಿಗೊಳ್ಳಲಿದೆ. ಜೊತೆಗೆ, ಟೆಂಡರ್ ಆನ್‌ಲೈನ್ ಮೂಲಕ ಸಾರ್ವಜನಿಕ ಹರಾಜು ನಡೆದಿದ್ದು, ಇದು ಕಾನೂನು ಬದ್ಧವಾಗಿದ್ದರೆ ಲಂಚವನ್ನು ಪಾವತಿಸುವ ಪ್ರಶ್ನೆಯೇ ಉದ್ಭವಿಸುತ್ತಿರಲಿಲ್ಲ ಎಂದು ನ್ಯಾಯಪೀಠ ತನ್ನ ಆದೇಶಲ್ಲಿ ತಿಳಿಸಿದೆ.
ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ಸೋಮವಾರ ಆದೇಶ ಪ್ರಕಟಿಸಿದೆ. ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಎಫ್ ಐ ಆರ್ ನಲ್ಲಿ ಅರ್ಜಿದಾರರ ವಿರುದ್ಧ ಆರೋಪ ಸಾಬೀತು ಪಡಿಸಲು ಯಾವುದೇ ಸಾಕ್ಷಿಗಳಿಲ್ಲ. ಟೆಂಡರ್ ಗೆ ಲಂಚ ನೀಡುವಂತೆ 30ರಷ್ಟು ಕಮಿಷನ್ ಬೇಡಿಕೆ ಇಟ್ಟಿರುವ ಬಗ್ಗೆ, ಪ್ರಯತ್ನ ನಡೆಸಿರುವ ಬಗ್ಗೆ ಅಥವಾ ನಿರ್ದಿಷ್ಟ ದಿನದಂದು ಲಂಚ ಕೊಡುವಂತೆ ಕೇಳಿದ ಬಗ್ಗೆ ಯಾವುದೇ ಸಾಕ್ಷಿ ಇಲ್ಲ ಎಂದು ವಾದ ಮಂಡಿಸಿದರು.