ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೀವ್ರತರದ ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಚಳಿಯ ವಾತಾವರಣ ಸೃಷ್ಟಿಯಾಗಿದೆ. ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ಹೇಳಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.