ಬೆಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು. ಒಂದೊಮ್ಮೆ ಭಾಗವಹಿಸಿದರೆ ಅಂತಹ ವಕೀಲರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಕೈಗೊಂಡಿದ್ದ ನಿರ್ಣಯವನ್ನು ಮಂಡ್ಯ ವಕೀಲರ ಸಂಘ ಹಿಂಪಡೆದಿದೆ ಎಂಬುದಾಗಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಬಾರದು, ಭಾಗವಹಿಸಿದ ವಕೀಲರ ವಿರುದ್ದ ಕ್ರಮ ಜರುಗಿಸುವುದಾಗಿ ಮಂಡ್ಯ ಜಿಲ್ಲಾ ವಕೀಲರ ಸಂಘ ನಿರ್ಣಯ ಕೈಗೊಂಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ.ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ರೆಡ್ಡಿ, ಮಂಡ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಮಂಡ್ಯ ವಕೀಲರ ಸಂಘದ ಸದಸ್ಯರ ನಡುವಿನ ಕೆಲವೊಂದು ಸಮಸ್ಯೆಗಳಿಂದಾಗಿ ಈ ರೀತಿಯ ತಪ್ಪು ನಿರ್ಣಯ ಕೈಗೊಳ್ಳಲಾಗಿದೆ. ಇದೊಂದು ದುರಾಷ್ಟ್ರಕರ. ಆದರೆ, ಈ ನಿರ್ಣಯವನ್ನು ವಾಪಸ್ ಪಡೆದುಕೊಳ್ಳಲಾಗಿದೆ. ಅಷ್ಟೇ ಅಲ್ಲದೇ ಎಲ್ಲಾ ಜಿಲ್ಲಾ ಮತ್ತು ತಾಲೂಕುಗಳಲ್ಲಿ ಸ್ಥಳೀಯ ಕಾನೂನು ಸೇವಾ ಪ್ರಾಧಿಕಾರಗಳೊಂದಿಗೆ ರಾಜ್ಯ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನಗಳನ್ವಯ ಸ್ಥಳೀಯ ವಕೀಲರು ಸಹಾಯ ಮತ್ತು ಸಹಕಾರ ನೀಡಿದ್ದಾರೆ. ಇಬ್ಬರ ಜಂಟಿ ಪ್ರಯತ್ನದ ಮೂಲಕ ಲೋಕ್ ಅದಾಲತ್‌ನಂತಹ ಉದಾತ್ತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ ಎಂದು ಮೌಖಿಕವಾಗಿ ಹೇಳಿದರು.