ಬೆಂಗಳೂರು :ಮಂಗಳೂರಿನ ಘನತ್ಯಾಜ್ಯ ವಿಲೇವಾರಿ ಘಟಕದಿಂದ ಹೊರ ಬರುತ್ತಿರುವ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂಗೆ ಸೇರುತ್ತಿರುವುದನ್ನು ತಡೆಗಟ್ಟಲು ಯಾವುದೇ ಕ್ರಮಕೈಗೊಳ್ಳದ ಮಂಗಳೂರಿನ ಮಹಾನಗರ ಪಾಲಿಕೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಘನತ್ಯಾಜ್ಯ ಭೂಭರ್ತಿ ಘಟಕ ಕುಸಿತದಿಂದ ಆಗಿರುವ ಅನಾಹುತಗಳ ಕುರಿತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಪಾಲಿಸದ ಮಂಗಳೂರು ಪಾಲಿಕೆ ಹಾಗೂ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಶ್ರೀಧರ್ ಪ್ರಭು ವಾದಿಸಿ, ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಹೊರ ಬರುತ್ತಿರುವ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂ ಸೇರುತ್ತಿದೆ. ಹೀಗಾಗಿ, ನದಿ ನೀರು ಸಂಪೂರ್ಣ ಕಲುಷಿತಗೊಂಡಿದೆ.
ಇದೇ ಕಲುಷಿತ ನೀರನ್ನು 13 ಗ್ರಾಮಗಳ ಜನ ಕುಡಿಯುತ್ತಿರುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿ) ವರದಿಯಲ್ಲಿ ದೃಢಪಡಿಸಿದೆ. ಆದರೆ, ನೀರು ಕಲುಷಿತಗೊಳ್ಳುವುದನ್ನು ತಡೆಯುವಲ್ಲಿ ಬೇಜವಾಬ್ದಾರಿ ತೋರುತ್ತಿರುವ ಪಾಲಿಕೆ ವಿರುದ್ಧ ಕೆಎಸ್‌ಪಿಸಿಬಿಯಾಗಲೀ, ರಾಜ್ಯ ಸರ್ಕಾರವಾಗಲೀ ಕ್ರಮಕೈಗೊಂಡಿಲ್ಲ ಎಂದು ಪೀಠಕ್ಕೆ ವಿವರಿಸಿದರು.