ಬೆಂಗಳೂರು :ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿರುವುದು ಐತಿಹಾಸಿಕ ಸತ್ಯ ಎಂದು ಸಚಿವ ಎಂ ಬಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿರುವುದು ಐತಿಹಾಸಿಕ ಸತ್ಯ. ಅದು ಎಲ್ಲರಿಗೂ ಗೊತ್ತಿರುವಂತದ್ದೇ. ಅದನ್ನು ಹೇಳುವುದು ತಪ್ಪೇನೂ ಅಲ್ಲ. ಆದರೆ, ಮುಂಚೆ ಮುಂಬೈ, ಹೈದರಾಬಾದ್, ಮದ್ರಾಸ್ ಪ್ರಾಂತ್ಯಕ್ಕೆ ಒಳಪಟ್ಟ ಪ್ರದೇಶಗಳು ಪುನರ್ ವಿಂಗಡಣೆ ನಂತರ ಸಮಗ್ರ ಕರ್ನಾಟಕದ ಭಾಗವಾಗಿವೆ. ಅಂತಹ ಎಲ್ಲಾ ಪ್ರದೇಶಗಳು ಈಗ ಸಮಗ್ರ ಕರ್ನಾಟಕದಲ್ಲೇ ಇವೆ ಎಂದಿದ್ದಾರೆ.
ಕಾಂತರಾಜ ವರದಿಗೆ ವಿರೋಧವಿಲ್ಲ : ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂತರಾಜ ವರದಿ ಸ್ವೀಕರಿಸಲು ಆಗ್ರಹಿಸಿರುವ ಬಗ್ಗೆ ಮಾಧ್ಯಮದವರು ಕೇಳಿದಾಗ ಪ್ರತಿಕ್ರಿಯಿಸಿದ ಸಚಿವ ಎಂ ಬಿ ಪಾಟೀಲ್, ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.